ಬೆಂಗಳೂರು: ಪತಿಯ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿದ್ದರೂ, ಪತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಪತ್ನಿಗೆ ಕಿರುಕುಳ ನೀಡಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆರ್.ಎಸ್. ಪಾಳ್ಯದ ನಿವಾಸಿ ನಿಕ್ಸೋನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ.
ಪ್ರಕರಣದ ವಿವರಗಳ ಪ್ರಕಾರ, 2025ರ ಅಕ್ಟೋಬರ್ 20ರಂದು ಪತಿ-ಪತ್ನಿ ನಡುವೆ ಜಗಳ ನಡೆದಿತ್ತು. ಈ ವೇಳೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮನೆಯ ಎರಡನೇ ಮಹಡಿಯಿಂದ ಕೆಳಗೆ ಜಿಗಿದಿದ್ದರು. ಪರಿಣಾಮವಾಗಿ ಅವರಿಗೆ ಬೆನ್ನುಮೂಳೆ ಹಾಗೂ ಕೈಗೆ ಗಂಭೀರ ಗಾಯಗಳಾಗಿದ್ದರೂ, ಬಳಿಕ ಚಿಕಿತ್ಸೆ ಪಡೆದು ಸಂಪೂರ್ಣ ಚೇತರಿಸಿಕೊಂಡಿದ್ದರು.
ಆದರೆ ಮಹಿಳೆ ಬದುಕಿದ್ದರೂ, ತನಿಖಾಧಿಕಾರಿಗಳು ಭಾರತೀಯ ನಾಗರಿಕ ಸಂಹಿತೆಯ ಸೆಕ್ಷನ್ 108ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪವನ್ನು ದಾಖಲಿಸಿ ಪತಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಈ ಕ್ರಮವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಜೀವಂತವಾಗಿದ್ದರೂ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ದೋಷಾರೋಪ ಪಟ್ಟಿ ಸಲ್ಲಿಸಿರುವುದು ಕಾನೂನು ಅರಿವಿನ ಕೊರತೆ ಹಾಗೂ ತನಿಖೆಯಲ್ಲಿನ ಗಂಭೀರ ಲೋಪವನ್ನು ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಅಜಾಗರೂಕತೆ ಅಥವಾ ಆತುರದ ನಿರ್ಧಾರದಿಂದ ಸಲ್ಲಿಸಲಾದ ಈ ದೋಷಾರೋಪ ಪಟ್ಟಿಯಿಂದ ಅರ್ಜಿದಾರ ಸುಮಾರು ಆರು ತಿಂಗಳು ಜೈಲಿನಲ್ಲಿ ಕಾಲ ಕಳೆಯುವಂತಾಗಿದೆ. ಇದು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ನ್ಯಾಯಾಲಯ ಕಿಡಿಕಾರಿದೆ.
ತನಿಖಾಧಿಕಾರಿಯ ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯ ನ್ಯಾಯಾಂಗದ ಮನಃಸಾಕ್ಷಿಗೆ ಆಘಾತ ಉಂಟುಮಾಡಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಸಂಬಂಧಪಟ್ಟ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಸರ್ಕಾರಕ್ಕೆ ಆದೇಶಿಸಿದೆ.
ಜೊತೆಗೆ, ವಿಚಾರಣೆಯ ಆಧಾರದ ಮೇಲೆ ಕೈಗೊಂಡ ಕ್ರಮದ ಕುರಿತು ಮೂರು ತಿಂಗಳೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.
ವಿಚಾರಣೆ ವೇಳೆ ಪತಿ ಮತ್ತು ಪತ್ನಿ ಇಬ್ಬರೂ ಭವಿಷ್ಯದಲ್ಲಿ ಜೊತೆಯಾಗಿ ಜೀವನ ನಡೆಸಲು ತೀರ್ಮಾನಿಸಿದ್ದು, ಪರಸ್ಪರ ರಾಜಿ ಸಂಧಾನದ ಮೂಲಕ ವಿವಾದ ಬಗೆಹರಿಸಿಕೊಂಡಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು.
ಇದನ್ನು ಪರಿಗಣಿಸಿದ ಹೈಕೋರ್ಟ್, ನಿಕ್ಸೋನ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಜೊತೆಗೆ ಅರ್ಜಿದಾರರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆಯೂ ನಿರ್ದೇಶನ ನೀಡಿದೆ.



