ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದಂತೆ ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ) ಸಭೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಇದೇ ಸಭೆಯಲ್ಲಿ ಸಚಿವ ಸಂಪುಟದ ರೂಪುರೇಷೆಗಳ ಕುರಿತೂ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ನಗರದ ಸರ್ಕಾರಿ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಾರಕಿಹೊಳಿ, ಸಿಎಲ್‌ಪಿ ಸಭೆಯ ಪ್ರಮುಖ ಅಜೆಂಡಾ ಮುಖ್ಯಮಂತ್ರಿ ಆಯ್ಕೆ ಮಾತ್ರವಾಗಿದ್ದು, ಹೈಕಮಾಂಡ್ ಈಗಾಗಲೇ ತೆಗೆದುಕೊಂಡಿರುವ ತೀರ್ಮಾನದಂತೆ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
“ಹೈಕಮಾಂಡ್ ಸೂಚನೆಯಂತೆ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಇಂದು ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರಕ್ಕೆ ಅಧಿಕೃತ ಮುದ್ರೆ ಬೀಳಲಿದೆ” ಎಂದು ಜಾರಕಿಹೊಳಿ ಹೇಳಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ಮತ್ತು ಸಮಯ ನಿಗದಿಪಡಿಸುವ ಉದ್ದೇಶದಿಂದ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಸಮಾರಂಭದ ಕುರಿತು ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಮೂರು ಅಥವಾ ನಾಲ್ಕು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಪಕ್ಷದ ವರಿಷ್ಠರು ಚರ್ಚೆ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದ್ದು, ನಾಳೆಯೊಳಗೆ ಸ್ಪಷ್ಟ ಚಿತ್ರಣ ದೊರೆಯಬಹುದು ಎಂದು ಜಾರಕಿಹೊಳಿ ಹೇಳಿದರು.
ತಮ್ಮ ಹೆಸರೂ ಡಿಸಿಎಂ ಹುದ್ದೆಗೆ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದನ್ನು ತಾನೇ ನಿರ್ಧರಿಸುತ್ತದೆ. ತಮ್ಮಿಂದ ಯಾವುದೇ ಬೇಡಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಯಾರನ್ನು ನೇಮಿಸಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಜಾರಕಿಹೊಳಿ, ಈ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಎಂದರು. ವರಿಷ್ಠರ ಬಳಿ ಎರಡು ಅಥವಾ ಮೂರು ಹೆಸರುಗಳು ಇರಬಹುದು. ಅವರಲ್ಲಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಹೈಕಮಾಂಡ್‌ಗೇ ಸೇರಿದೆ ಎಂದು ಹೇಳಿದರು.
ಹೊಸ ಸಚಿವ ಸಂಪುಟ ರಚನೆ ಕುರಿತು ಮಾತನಾಡಿದ ಅವರು, ಆಡಳಿತದಲ್ಲಿ ಅನುಭವಿಗಳೂ ಬೇಕು, ಹೊಸ ಮುಖಗಳಿಗೂ ಅವಕಾಶ ಸಿಗಬೇಕು. ಸಚಿವ ಸಂಪುಟದಲ್ಲಿ ಈ ಎರಡರ ಸಮತೋಲನ ಕಾಪಾಡುವುದು ಅಗತ್ಯವಾಗಿದ್ದು, ಅದನ್ನು ಗಮನದಲ್ಲಿಟ್ಟುಕೊಂಡೇ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.



