ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ನಾಯಕರ ಆಯ್ಕೆಗಾಗಿ ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಅಧಿಕೃತವಾಗಿ ನಾಯಕನಾಗಿ ಆಯ್ಕೆ ಮಾಡುವ ಪ್ರಕ್ರಿಯೆಗೆ ಮುದ್ರೆ ಬೀಳಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಅಥವಾ ಸ್ಪರ್ಧೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಈಗಾಗಲೇ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿರಿಸಿರುವ ಹಿನ್ನೆಲೆಯಲ್ಲಿ ಸಿಎಲ್ಪಿ ಸಭೆ ಕೇವಲ ಔಪಚಾರಿಕ ಪ್ರಕ್ರಿಯೆಯಾಗಿದೆ ಎಂದು ಹೇಳಿದರು.
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಯಾವುದೇ ಪೈಪೋಟಿ ಇಲ್ಲ. ಹೈಕಮಾಂಡ್ ನಿರ್ಧಾರ ಈಗಾಗಲೇ ಪ್ರಕಟವಾಗಿದೆ. ಇಂದು ನಡೆಯುವ ಸಭೆ ರಾಜ್ಯಪಾಲರಿಗೆ ಮಾಹಿತಿ ನೀಡುವ ಪ್ರಕ್ರಿಯೆಯ ಭಾಗ ಮಾತ್ರ ಎಂದು ಅವರು ತಿಳಿಸಿದರು.
ಉಪಮುಖ್ಯಮಂತ್ರಿ ಹುದ್ದೆಗಳ ಕುರಿತು ನಡೆಯುತ್ತಿರುವ ಚರ್ಚೆ ಬಗ್ಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಡಿಸಿಎಂ ಹುದ್ದೆ ಸೃಷ್ಟಿಸುವ ಅಗತ್ಯವಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದರು.
ಡಿಸಿಎಂ ಎಂಬುದು ಸಾಂವಿಧಾನಿಕ ಹುದ್ದೆಯಲ್ಲ. ಇಂತಹ ಹುದ್ದೆಗಳನ್ನು ಹೆಚ್ಚಿಸಿದರೆ ವಿವಿಧ ಸಮುದಾಯಗಳು ಮತ್ತು ಗುಂಪುಗಳಿಂದ ಮತ್ತಷ್ಟು ಬೇಡಿಕೆಗಳು ಹುಟ್ಟಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಈ ವಿಚಾರದಲ್ಲಿ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಸಚಿವ ಸಂಪುಟದಲ್ಲಿ ತಮ್ಮ ಪಾತ್ರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮ ರಾಜಕೀಯ ಅನುಭವ ಮತ್ತು ಹಿರಿತನಕ್ಕೆ ತಕ್ಕ ಜವಾಬ್ದಾರಿ ಸಿಗುವ ನಿರೀಕ್ಷೆಯಿದೆ ಎಂದು ಹೇಳಿದರು.
“ನಾನು ಯಾವುದೇ ಖಾತೆಗಾಗಿ ಲಾಬಿ ನಡೆಸುವುದಿಲ್ಲ. ಪಕ್ಷ ಮತ್ತು ನಾಯಕತ್ವ ಯಾವ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿರ್ವಹಿಸುವ ವಿಶ್ವಾಸ ನನ್ನಲ್ಲಿದೆ” ಎಂದು ರಾಮಲಿಂಗಾ ರೆಡ್ಡಿ ಹೇಳಿದರು.



