ಬೆಂಗಳೂರು: ರಾಜ್ಯ ಸರ್ಕಾರ ಜನರಿಂದ ವಿವಿಧ ರೀತಿಯ ತೆರಿಗೆಗಳನ್ನು ಸಂಗ್ರಹಿಸುತ್ತಿದ್ದರೂ, ಅವರ ಬದುಕಿಗೆ ಯಾವುದೇ ಭದ್ರತೆ ಅಥವಾ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.
ನಗರದ ಜಗನ್ನಾಥ ಭವನದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಬಂದಾಗ ಬೆಂಗಳೂರಿನ ಜನರು ಆತಂಕದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಜನರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಟೀಕಿಸಿದರು.
“ಪ್ರತಿ ವರ್ಷ ಮಳೆಗಾಲ ಆರಂಭವಾದಾಗ ಬೆಂಗಳೂರಿನಲ್ಲಿ ನೂರಾರು ಸಮಸ್ಯೆಗಳು ತಲೆದೋರುತ್ತವೆ. ಆದರೆ ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇತ್ತೀಚೆಗೆ ಬೌರಿಂಗ್ ಆಸ್ಪತ್ರೆ ಸಮೀಪ ಕಾಂಪೌಂಡ್ ಕುಸಿದು ಏಳು ಮಂದಿ ಮೃತಪಟ್ಟಿದ್ದರು. ನಿನ್ನೆ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಇವು ದಾಖಲಾಗಿರುವ ಸಾವುಗಳು ಮಾತ್ರ. ಗುಂಡಿಗಳಲ್ಲಿ ಬಿದ್ದು ಅಥವಾ ಮರದ ಕೊಂಬೆಗಳು ಬಿದ್ದು ಮೃತಪಟ್ಟವರ ಸಂಖ್ಯೆ ಬೇರೆ ಇದೆ” ಎಂದು ಹೇಳಿದರು.
ಜನರ ಜೀವಹಾನಿಯಂತಹ ಗಂಭೀರ ಘಟನೆಗಳ ಬಗ್ಗೆ ಸರ್ಕಾರ ಯಾವುದೇ ಕಾಳಜಿ ತೋರಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಮುಂಗಾರು ಆರಂಭಕ್ಕೂ ಮುನ್ನ ನಗರದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳತ್ತ ಸರ್ಕಾರ ಗಮನಹರಿಸಿಲ್ಲ ಎಂದರು.
ಮಾರತಹಳ್ಳಿ, ಸಿಲ್ಕ್ ಬೋರ್ಡ್, ಕೆ.ಆರ್. ಸರ್ಕಲ್ ಸೇರಿದಂತೆ ನಗರದ ಹಲವು ಪ್ರಮುಖ ಜಂಕ್ಷನ್‌ಗಳು ಮಳೆ ಬಂದಾಗ ಜಲಾವೃತವಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಮಸ್ಯೆ ವರ್ಷದಿಂದ ವರ್ಷಕ್ಕೆ ಮುಂದುವರಿಯುತ್ತಿದೆ. ಆದರೂ ಸರ್ಕಾರದಿಂದ ಯಾವುದೇ ಪರಿಣಾಮಕಾರಿ ಕ್ರಮಗಳು ಕಾಣಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
“ಮನೆ ತೆರಿಗೆ, ಘನತ್ಯಾಜ್ಯ ತೆರಿಗೆ ಸೇರಿದಂತೆ ವಿವಿಧ ಶುಲ್ಕಗಳ ಮೂಲಕ ಸರ್ಕಾರ ಸಾವಿರಾರು ಕೋಟಿ ರೂಪಾಯಿ ಸಂಗ್ರಹಿಸುತ್ತದೆ. ಆದರೆ ಸಾರ್ವಜನಿಕರಿಗೆ ಅಗತ್ಯವಾದ ಸೇವೆಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಮಳೆ ಬಂದರೆ ಇಡೀ ಬೆಂಗಳೂರು ಮುಳುಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ದೂರಿದರು.
ನಗರ ಮತ್ತು ರಾಜ್ಯದ ಆಡಳಿತ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಅಶ್ವತ್ಥನಾರಾಯಣ, ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯವಿರುವ ಹಣ ಸರ್ಕಾರದ ಬಳಿ ಇದ್ದರೂ ಅದನ್ನು ಸಮರ್ಪಕವಾಗಿ ಬಳಸುತ್ತಿಲ್ಲ. ಹೀಗಾಗಿ ಕೂಡಲೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.



