ಶಿವಮೊಗ್ಗ: ಅಕ್ರಮ ಮರಳು ಸಾಗಣೆ ಕುರಿತ ದೂರುಗಳು ಹೆಚ್ಚಾಗುತ್ತಿದ್ದಂತೆಯೇ ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ವಿವಿಧ ಕ್ವಾರಿಗಳು ಮತ್ತು ಮರಳು ಸಂಗ್ರಹ ಕೇಂದ್ರಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.
ಜಿಲ್ಲೆಯ ಹಲವೆಡೆ ನಡೆಯುತ್ತಿರುವ ಮರಳು ಗಣಿಗಾರಿಕೆ ಹಾಗೂ ಸಂಗ್ರಹ ಚಟುವಟಿಕೆಗಳ ದಾಖಲೆಗಳನ್ನು ಪರಿಶೀಲಿಸಿರುವ ಅಧಿಕಾರಿಗಳು, ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೊಸನಗರ, ಸಾಗರ, ತೀರ್ಥಹಳ್ಳಿ ಸೇರಿದಂತೆ ಹಲವು ತಾಲೂಕುಗಳ ಕ್ವಾರಿಗಳು ತನಿಖೆಗೆ ಒಳಗಾಗಿವೆ.
ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲೂ ಅಕ್ರಮ ಮರಳು ಸಾಗಾಟದ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ದೂರುಗಳ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದು, ಗಣಿಗಾರಿಕೆ ವಲಯದಲ್ಲಿ ಆತಂಕ ಮೂಡಿಸಿದೆ.



