ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾದ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿ ಸುರಕ್ಷಿತವಾಗಿ ಕರೆಯತ್ತ ಕರೆತಂದಿದ್ದಾರೆ.
ಅಂಕೋಲಾ ತಾಲೂಕಿನ ಬೆಳಂಬಾರ ಕಡಲತೀರದಿಂದ ಮೀನುಗಾರಿಕೆಗೆ ತೆರಳಿದ್ದ ಮಂಜುನಾಥ್ ಖಾರ್ವಿ ಅವರಿಗೆ ಸೇರಿದ ‘ಶ್ರೀ ನವರತ್ನ’ ಹೆಸರಿನ ಮೀನುಗಾರಿಕಾ ಬೋಟ್ ಹೊನ್ನಾವರ ಸಮುದ್ರ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವಘಡಕ್ಕೀಡಾಗಿದೆ. ಬೋಟ್‌ನ ಹೊರಭಾಗಕ್ಕೆ ಹಾನಿಯಾಗಿದ್ದರಿಂದ ಸಮುದ್ರದ ನೀರು ಒಳಗೆ ನುಗ್ಗಿ, ಕೆಲವೇ ಕ್ಷಣಗಳಲ್ಲಿ ಬೋಟ್ ಮುಳುಗಲು ಆರಂಭಿಸಿದೆ.
ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಮೀನುಗಾರರು ಸಹಾಯಕ್ಕಾಗಿ ಕೂಗಿಕೊಂಡಿದ್ದು, ಸಮೀಪದಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಇಕ್ಬಾಲ್ ಅಬ್ದುಲ್ ಗಫೂರ್ ಅವರು ತಮ್ಮ ಬೋಟ್‌ನೊಂದಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿ ಕರೆಯತ್ತ ಕರೆತಂದಿದ್ದಾರೆ.
ರಕ್ಷಿಸಲ್ಪಟ್ಟ ಮೀನುಗಾರರನ್ನು ವೆಂಕಟೇಶ್ ಖಾರ್ವಿ, ನಾಗಪ್ಪ ಖಾರ್ವಿ, ಸಂದೀಪ್ ಖಾರ್ವಿ, ವಿಕಾಸ್ ಖಾರ್ವಿ, ವಿಘ್ನೇಶ್ ಖಾರ್ವಿ, ರಜತ್ ಬಾಣಾವಳಿಕರ್ ಹಾಗೂ ಲತೇಶ್ ಖಾರ್ವಿ ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಆದರೆ ಬೋಟ್ ಸಂಪೂರ್ಣವಾಗಿ ಮುಳುಗಡೆಯಾಗಿರುವ ಪರಿಣಾಮ ಮಾಲೀಕರಿಗೆ ಅಂದಾಜು 50 ಲಕ್ಷ ರೂಪಾಯಿಗೂ ಅಧಿಕ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಹೊನ್ನಾವರ ಕರಾವಳಿ ಭದ್ರತಾ ಪೊಲೀಸ್ ಠಾಣೆ (ಸಿಎಸ್ಪಿ) ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.



