ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದಡಿ ಬೆಳಗಾವಿ ಜಿಲ್ಲಾ ಸೈಬರ್ ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಕರುನಾಡ ಕುರುಬ ಗೌಡ್ರು’ ಹೆಸರಿನ ಮುಖಪುಟ ಖಾತೆಯಲ್ಲಿ ಪ್ರಕಟವಾದ ಪೋಸ್ಟ್‌ನಲ್ಲಿ, ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದ್ರೋಹ ಮಾಡಿದ್ದಾರೆ ಹಾಗೂ ಅವರ ವಿರುದ್ಧ 37 ಶಾಸಕರ ಸಹಿ ಸಂಗ್ರಹಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
ಈ ಮಾಹಿತಿ ಸಂಪೂರ್ಣ ಸುಳ್ಳಾಗಿದ್ದು, ಸಚಿವರ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದಲೇ ಇಂತಹ ಆರೋಪಗಳನ್ನು ಸೃಷ್ಟಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಈ ಮೂಲಕ ಸಾರ್ವಜನಿಕರಲ್ಲಿ ಗೊಂದಲ ಮತ್ತು ಅಶಾಂತಿ ಉಂಟುಮಾಡುವ ಪ್ರಯತ್ನ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.



