ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಾರುತಗಳು ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷವಾಗಿ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಶಿವಮೊಗ್ಗ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಉಳಿದ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಯಾದಗಿರಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
ಮಳೆ ಹಾಗೂ ಬಿರುಗಾಳಿ ಸಂದರ್ಭಗಳಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಎಂದು ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಇಲಾಖೆ ಸೂಚನೆ ನೀಡಿದೆ. ಗುಡುಗು-ಮಿಂಚಿನ ಸಮಯದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.



