ಭೋಪಾಲ್ : ಮಾಡೆಲ್ ಹಾಗೂ ನಟಿ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಪತಿ ಸಮರ್ಥ್ ಸಿಂಗ್ ಹಾಗೂ ಅತ್ತೆ ಗಿರಿಬಾಲಾ ಸಿಂಗ್ ಇಬ್ಬರಿಗೂ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ವರದಕ್ಷಿಣೆ ಕಿರುಕುಳ ಆರೋಪದಡಿ ಬಂಧಿತರಾಗಿದ್ದ ಇಬ್ಬರ ಸಿಬಿಐ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಮಂಗಳವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯವು ಜೂನ್ 16ರವರೆಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ ಎಂದು ತಿಳಿದುಬಂದಿದೆ.
ವಿಚಾರಣೆ ಸಂದರ್ಭದಲ್ಲಿ ಎರಡೂ ಕಡೆಯ ವಕೀಲರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಆರೋಪಿಗಳ ಪರ ವಕೀಲ ಅನುರಾಗ್ ಶ್ರೀವಾಸ್ತವ್ ಜಬಲ್ಪುರ ಕೋರ್ಟ್ ಆವರಣದಲ್ಲಿ ಸಮರ್ಥ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಗಿರಿಬಾಲಾ ಸಿಂಗ್ ಮಾಡಿದ್ದಾರೆ. ಆದರೆ ಈ ಆರೋಪವನ್ನು ವಕೀಲರು ನಿರಾಕರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಸಾಕ್ಷಿಯಾಗಿ ಉಲ್ಲೇಖಿಸಿದ್ದಾರೆ.
ಇದಷ್ಟೇ ಅಲ್ಲದೆ ಪ್ರಕರಣದ ಪ್ರಮುಖ ಸಾಕ್ಷಿ ನೀರಜ್ ದುಬೆ ಮೇಲೆ ಹಲ್ಲೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪಿಗಳ ವಿರುದ್ಧ ಅನುಮಾನ ಹೆಚ್ಚಿಸಿದೆ. ಮೇ 30ರಂದು ಭೋಪಾಲ್‌ನಲ್ಲಿ ನೀರಜ್ ದುಬೆ ಅವರನ್ನು ನಾಲ್ಕೈದು ಮಂದಿ ಸುತ್ತುವರಿದು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ನಂತರ ಅವರು ಕಟಾರಾ ಹಿಲ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇತ್ತ, ಸೋಮವಾರ (ಜೂ.1) ಆರೋಪಿಗಳನ್ನು ಸ್ಥಳಕ್ಕೆ ಕರೆದೊಯ್ದು ಅಪರಾಧ ಮರುಸೃಷ್ಟಿ ಮಾಡಿಸಲಾಗಿದ್ದು, ಮೇ 12ರ ರಾತ್ರಿ ನಡೆದ ಘಟನೆ ಕುರಿತು ಸಿಬಿಐ ವಿವರವಾದ ಮಾಹಿತಿ ಸಂಗ್ರಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



