ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ ಕೆಲ ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಗುಡುಗು–ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ತೀವ್ರ ಮಳೆಯೊಂದಿಗೆ ಸಿಡಿಲು ಬೀಳುವ ಸಾಧ್ಯತೆ ಇರುವುದರಿಂದ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು–ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅದೇ ರೀತಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮಳೆ ಮತ್ತು ಸಿಡಿಲಿನ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಹಾಗೂ ಮರಗಳ ಕೆಳಗೆ ನಿಲ್ಲುವುದನ್ನು ತಪ್ಪಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.



