ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಚುನಾವಣಾ ಅಫಿಡವಿಟ್ಗಳಲ್ಲಿ ಘೋಷಿಸಿರುವ ಆಸ್ತಿ ವಿವರಗಳ ಪ್ರಕಾರ, ಅವರು ಇತರ ರಾಜ್ಯಗಳ ಮುಖ್ಯಮಂತ್ರಿಗಳನ್ನು ಹಿಂದಿಕ್ಕಿದ್ದಾರೆ.
2023ರ ವಿಧಾನಸಭೆ ಚುನಾವಣೆಯ ವೇಳೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ಡಿ.ಕೆ. ಶಿವಕುಮಾರ್ ಅವರು ಒಟ್ಟು 1,413 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದರು. ಇದರಲ್ಲಿ 273 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ ಹಾಗೂ 1,140 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಸೇರಿದೆ. ಜೊತೆಗೆ ತಮ್ಮ ಮೇಲೆ 265 ಕೋಟಿ ರೂಪಾಯಿಗೂ ಅಧಿಕ ಸಾಲವಿರುವುದಾಗಿ ಉಲ್ಲೇಖಿಸಿದ್ದರು.
ಶಿಕ್ಷಣ, ರಿಯಲ್ ಎಸ್ಟೇಟ್ ಹಾಗೂ ಉದ್ಯಮ ಕ್ಷೇತ್ರಗಳಲ್ಲಿ ಹೂಡಿಕೆ
ಡಿಕೆ ಶಿವಕುಮಾರ್ ಅವರ ಆಸ್ತಿಯಲ್ಲಿ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿನ ಭೂಮಿ, ವಾಣಿಜ್ಯ ಕಟ್ಟಡಗಳು, ಶಿಕ್ಷಣ ಸಂಸ್ಥೆಗಳು ಹಾಗೂ ರಿಯಲ್ ಎಸ್ಟೇಟ್ ಹೂಡಿಕೆಗಳು ಪ್ರಮುಖವಾಗಿವೆ. ಶಿಕ್ಷಣ ಕ್ಷೇತ್ರದಲ್ಲಿನ ಸಂಸ್ಥೆಗಳು, ಜಮೀನುಗಳು ಮತ್ತು ವಿವಿಧ ಉದ್ಯಮಗಳಲ್ಲಿ ಹೂಡಿಕೆ ಅವರ ಆಸ್ತಿ ಮೌಲ್ಯವನ್ನು ಗಣನೀಯವಾಗಿ ಹೆಚ್ಚಿಸಿವೆ.
ಇತರ ಸಿಎಂಗಳಿಗಿಂತ ಮುಂಚೂಣಿಯಲ್ಲಿ ಡಿಕೆಶಿ
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು 2024ರ ಚುನಾವಣಾ ಅಫಿಡವಿಟ್ನಲ್ಲಿ ಸುಮಾರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದರು. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಸುಮಾರು 648 ಕೋಟಿ ರೂಪಾಯಿ ಆಸ್ತಿ ಹೊಂದಿರುವುದಾಗಿ ದಾಖಲೆಗಳಲ್ಲಿ ಉಲ್ಲೇಖಿಸಿದ್ದಾರೆ.
ಆದರೆ 1,413 ಕೋಟಿ ರೂಪಾಯಿ ಘೋಷಿತ ಆಸ್ತಿಯೊಂದಿಗೆ ಡಿ.ಕೆ. ಶಿವಕುಮಾರ್ ಅವರು ಈ ಇಬ್ಬರು ಮುಖ್ಯಮಂತ್ರಿಗಳಿಗಿಂತಲೂ ಮುನ್ನಡೆ ಸಾಧಿಸಿ ದೇಶದ ಶ್ರೀಮಂತ ಮುಖ್ಯಮಂತ್ರಿ ಪಟ್ಟಿಗೆ ಏರಿದ್ದಾರೆ.
ದೇಶದ ಶ್ರೀಮಂತ ಶಾಸಕ ಯಾರು?
ದೇಶದ ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಮಹಾರಾಷ್ಟ್ರದ ಘಾಟ್ಕೋಪರ್ ಪೂರ್ವ ಕ್ಷೇತ್ರದ ಶಾಸಕ ಪರಾಗ್ ಶಾ ಅಗ್ರಸ್ಥಾನದಲ್ಲಿದ್ದಾರೆ. ಅವರು 2024ರ ಚುನಾವಣೆಗೆ ಮುನ್ನ ಸಲ್ಲಿಸಿದ್ದ ಅಫಿಡವಿಟ್ನಲ್ಲಿ 3,383 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದರು.
ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ನಾಯಕತ್ವದ ಜೊತೆಗೆ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ವಿಶೇಷ ಗುರುತಿನೊಂದಿಗೆ ಅಧಿಕಾರ ಸ್ವೀಕರಿಸಲು ಸಜ್ಜಾಗಿದ್ದಾರೆ.



