ಗದಗ: ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಹಾಗೂ ಮಟ್ಕಾ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, “ಮಟ್ಕಾ ಆಡಿದ್ರೆ ಗಡಿಪಾರು ಗ್ಯಾರಂಟಿ” ಎಂಬ ಸ್ಪಷ್ಟ ಸಂದೇಶವನ್ನು ಅಧಿಕಾರಿಗಳು ರವಾನಿಸಿದ್ದಾರೆ.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ನಡೆದ 2025-26ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಪ್ಲೇಯಿಂಗ್ ಸ್ಕ್ವಾಡ್ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲೆಯಲ್ಲಿ ನಡೆಯುತ್ತಿರುವ ಮಟ್ಕಾ ಹಾಗೂ ಅನಧಿಕೃತ ಲಾಟರಿ ದಂಧೆಗಳನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಮಟ್ಕಾ ಪ್ರಕರಣಗಳಿಗೆ ಸಂಬಂಧಿಸಿದ ಅನೇಕ ಪ್ರಕರಣಗಳು ವಿಚಾರಣಾ ಹಂತದಲ್ಲಿದ್ದು, ಅವುಗಳನ್ನು ಶೀಘ್ರ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಡಿಪಾರು ಮಾಡಲಾಗಿರುವ ಆರೋಪಿತರ ಆರ್ಥಿಕ ಚಟುವಟಿಕೆಗಳ ಮೇಲೂ ನಿಗಾ ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಜಿಎಸ್‌ಟಿ ಕಾಯ್ದೆಯಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ತೆರಿಗೆ ಇಲಾಖೆಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಮಾತನಾಡಿದ ಡಿವೈಎಸ್‌ಪಿ ಮಹಾಂತೇಶ ಸಜ್ಜನ, ಮಟ್ಕಾ ದಂಧೆಯಲ್ಲಿ ನಿರಂತರವಾಗಿ ಭಾಗಿಯಾಗುವವರ ವಿರುದ್ಧ ಗಡಿಪಾರು ಕ್ರಮ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಜನವರಿ 2026ರಲ್ಲಿ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಡಂಬಳ ಗ್ರಾಮದ ಬಸವರಾಜ ತಂದೆ ಮೈಲಪ್ಪ ದೊಡ್ಡಮನಿ (21) ಎಂಬಾತನನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಅದೇ ರೀತಿ, ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ವಿರುಪಾಕ್ಷಪ್ಪ ತಂದೆ ಶಂಕ್ರಪ್ಪ ಸಂಗಪ್ಪಶೆಟ್ಟರ (58) ಎಂಬಾತನನ್ನು ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಮೂರುಕ್ಕಿಂತ ಹೆಚ್ಚು ಮಟ್ಕಾ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿತರ ವಿರುದ್ಧ ಗಡಿಪಾರು ಶಿಕ್ಷೆ ವಿಧಿಸಲಾಗುತ್ತಿದ್ದು, ಈ ಕಠಿಣ ಕ್ರಮದಿಂದ ಜಿಲ್ಲೆಯಲ್ಲಿನ ಮಟ್ಕಾ ದಂಧೆ ಇಳಿಮುಖವಾಗುತ್ತಿದೆ ಎಂದು ಡಿವೈಎಸ್‌ಪಿ ಮಹಾಂತೇಶ ಸಜ್ಜನ ಹೇಳಿದರು.
“ಮಟ್ಕಾ ಹಾಗೂ ಅನಧಿಕೃತ ಲಾಟರಿ ದಂಧೆಯಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಯಾದ ಸಿ.ಎನ್. ಶ್ರೀಧರ್ ಹೇಳಿದ್ದಾರೆ.
ಗಡಿಪಾರುಗೊಂಡ ಆರೋಪಿತರು
ಬಸವರಾಜ ತಂದೆ ಮೈಲಪ್ಪ ದೊಡ್ಡಮನಿ (21), ಸಾ: ಡಂಬಳ
ವಿಜಯನಗರ ಜಿಲ್ಲೆ, ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು
ವಿರುಪಾಕ್ಷಪ್ಪ ತಂದೆ ಶಂಕ್ರಪ್ಪ ಸಂಗಪ್ಪಶೆಟ್ಟರ (58), ಸಾ: ಶಿರಹಟ್ಟಿ
ವಿಜಯನಗರ ಜಿಲ್ಲೆ, ಕೊಟ್ಟೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು



