ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದೆ. ಮುಖ್ಯಮಂತ್ರಿ ಜೊತೆಗೆ 13 ಮಂದಿ ಸಚಿವರು ಸಹ ಪ್ರಮಾಣವಚನ ಸ್ವೀಕರಿಸುವ ಮೂಲಕ ಡಿಕೆಶಿ ಸಚಿವ ಸಂಪುಟದ ಮೊದಲ ಹಂತದ ರಚನೆ ಪೂರ್ಣಗೊಂಡಿದೆ.
ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಸಂಪುಟ ದರ್ಜೆ ಸಚಿವರಾಗಿ ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಡಾ. ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣ ಪ್ರಕಾಶ್ ಪಾಟೀಲ್ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು, ಶಾಸಕರು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಹೊಸ ಸರ್ಕಾರ ಅಧಿಕಾರ ಸ್ವೀಕರಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.
ಸಂಪುಟದ ಸದಸ್ಯರಿಗೆ ಖಾತೆ ಹಂಚಿಕೆ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದ್ದು, ಮೊದಲ ಸಚಿವ ಸಂಪುಟ ಸಭೆಯತ್ತ ಈಗ ಎಲ್ಲರ ಗಮನ ನೆಟ್ಟಿದೆ.



