HomeGadag Newsಪೆಟ್ರೋಲ್ ಬಂಕ್‌ಗಳ ಆಟಕ್ಕೆ ಡಿಸಿ ಗರಂ!

ಪೆಟ್ರೋಲ್ ಬಂಕ್‌ಗಳ ಆಟಕ್ಕೆ ಡಿಸಿ ಗರಂ!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಪೂರೈಕೆಯಲ್ಲಿ ಉಂಟಾಗುತ್ತಿರುವ ವ್ಯತ್ಯಯವನ್ನು ಸಂಬಂಧಪಟ್ಟವರು ಸಮರ್ಪಕವಾಗಿ ನಿರ್ವಹಿಸಬೇಕು. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಟ್ಟು ಆತಂಕದಿಂದ ಇಂಧನ ಸಂಗ್ರಹಿಸುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್‌ನಲ್ಲಿ ಬುಧವಾರ ನಡೆದ ಪೆಟ್ರೋಲ್ ಬಂಕ್ ಮಾಲೀಕರು, ತೈಲ ಕಂಪನಿಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಇಂಧನ ಕೊರತೆ ಕುರಿತು ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿರುವುದು ಹಾಗೂ ಕೆಲವು ಬಂಕ್‌ಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿತ್ತು.

ತೈಲ ಕಂಪನಿಗಳು ಸಮಯಕ್ಕೆ ಸರಿಯಾಗಿ ಇಂಧನ ಪೂರೈಕೆ ಮಾಡಬೇಕು. ಸಾಕಷ್ಟು ದಾಸ್ತಾನು ಇದ್ದರೂ ಸಾರ್ವಜನಿಕರಿಗೆ ಇಂಧನ ನೀಡದೆ ಬಂಕ್ ಮುಚ್ಚುವುದು ಅಥವಾ “ಇಂಧನ ಲಭ್ಯವಿಲ್ಲ” ಎಂಬ ಫಲಕ ಹಾಕಿ ಕೃತಕ ಅಭಾವ ಸೃಷ್ಟಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದರು.

ಇಲಾಖೆಯ ಆಟೋಮೇಷನ್ ವ್ಯವಸ್ಥೆಯ ಮೂಲಕ ಬಂಕ್‌ಗಳ ದಾಸ್ತಾನು ಸ್ಥಿತಿಯನ್ನು ಆನ್‌ಲೈನ್‌ನಲ್ಲೇ ಪರಿಶೀಲಿಸಲು ಅವಕಾಶವಿದ್ದು, ನಿಯಮ ಉಲ್ಲಂಘಿಸುವ ಡೀಲರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಡಳಿತ ಪೆಟ್ರೋಲ್ ಬಂಕ್‌ಗಳಿಗೆ ಅಗತ್ಯ ಸಹಕಾರ ನೀಡಲು ಸಿದ್ಧವಿದ್ದು, ಬಂಕ್ ಮಾಲೀಕರು ಸರ್ಕಾರದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಇಂಧನ ವಿತರಣೆಯನ್ನು ನಿರ್ವಹಿಸಬೇಕು ಎಂದು ಸೂಚಿಸಿದರು.

ಇಂಧನ ಕೊರತೆಯಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವುದು ಎಲ್ಲರ ಜವಾಬ್ದಾರಿಯಾಗಿದ್ದು, ಇಂಡೆಂಟ್ ಆಧಾರದ ಮೇಲೆ ಆದ್ಯತೆಯ ಕ್ರಮದಲ್ಲಿ ಇಂಧನ ಪೂರೈಕೆ ಆಗಬೇಕು. ಎಲ್ಲರಿಗೂ ಸಮಾನ ಅವಕಾಶ ದೊರೆಯುವಂತೆ ವಿತರಣಾ ವ್ಯವಸ್ಥೆ ಇರಬೇಕು ಎಂದು ಹೇಳಿದರು.

ದೈನಂದಿನ ವಾಹನ ಸವಾರರಿಗೆ ಎಂದಿನಂತೆ ಯಾವುದೇ ಅಡೆತಡೆಯಿಲ್ಲದೆ ಇಂಧನ ಪೂರೈಸಬೇಕು. ಬಂಕ್‌ಗಳಲ್ಲಿ ಜನಸಂದಣಿ ಹೆಚ್ಚಾದ ಸಂದರ್ಭದಲ್ಲೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಸಿ ಸೂಚಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಪ್ರತಿನಿಧಿಗಳು ಹುಬ್ಬಳ್ಳಿಯಿಂದ ಬರುವ ಇಂಧನ ಟ್ಯಾಂಕರ್‌ಗಳಿಗೆ ಸಂಚಾರ ದಟ್ಟಣೆಯಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕರು, ತೈಲ ಕಂಪನಿಗಳ ಸೇಲ್ಸ್ ಅಧಿಕಾರಿಗಳು, ಪೆಟ್ರೋಲ್ ಬಂಕ್ ಮಾಲೀಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಸಾಕಷ್ಟು ಇಂಧನ ದಾಸ್ತಾನು ಇದ್ದರೂ ಕೃತಕ ಅಭಾವ ಸೃಷ್ಟಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.”

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಕ್ಯಾನ್‌ನಲ್ಲಿ ಡೀಸೆಲ್ ಮಾರಾಟಕ್ಕೆ ಬ್ರೇಕ್!

ಅನುಮತಿಯಿಲ್ಲದೆ ಕ್ಯಾನ್ ಹಾಗೂ ಬ್ಯಾರೆಲ್‌ಗಳಲ್ಲಿ ಇಂಧನ ಮಾರಾಟ ಮಾಡುವುದನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ನಿಷೇಧಿಸಿದೆ. ಆಸ್ಪತ್ರೆಗಳು, ಎಟಿಎಂ ಕೇಂದ್ರಗಳು, ಮೊಬೈಲ್ ಟವರ್‌ಗಳು ಹಾಗೂ ಅಗತ್ಯ ಸೇವೆಗಳ ಜನರೇಟರ್‌ಗಳಿಗೆ ಮಾತ್ರ ಸಂಬಂಧಪಟ್ಟ ತಹಸೀಲ್ದಾರ್ ಅಥವಾ ಜಿಲ್ಲಾಡಳಿತದ ಅನುಮತಿ ಪಡೆದು ಡೀಸೆಲ್ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸ್ಪಷ್ಟಪಡಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!