ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದ್ದು, ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ದಂಪತಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಮದುವೆಯಾಗಿ ಕೇವಲ ನಾಲ್ಕು ವರ್ಷಗಳಲ್ಲೇ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಅವರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರೂ ಪರಸ್ಪರ ಒಪ್ಪಿಗೆಯ ಆಧಾರದ ಮೇಲೆ ಕಾನೂನು ಪ್ರಕ್ರಿಯೆ ಮುಂದುವರಿಸಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.
ಕಳೆದ ಕೆಲವು ವರ್ಷಗಳ ಕಾಲ ಪ್ರೀತಿಯಲ್ಲಿ ಇದ್ದ ಈ ಜೋಡಿ 2022ರ ಜನವರಿ 5ರಂದು ತಮ್ಮ ಕುಟುಂಬದ ಸಮ್ಮುಖದಲ್ಲಿ ಅತ್ಯಂತ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಈಗ ಅಚಾನಕ್ ಆಗಿ ವಿಚ್ಛೇದನದ ನಿರ್ಧಾರಕ್ಕೆ ಬಂದಿರುವುದು ಅಭಿಮಾನಿಗಳಿಗೆ ದೊಡ್ಡ ಆಘಾತ ಉಂಟುಮಾಡಿದೆ.
ವಿಚ್ಛೇದನಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಅಧಿಕೃತವಾಗಿ ಬಹಿರಂಗವಾಗಿಲ್ಲ. ಈ ಕುರಿತು ಮಾಧ್ಯಮಗಳು ಸಂಪರ್ಕಿಸಿದಾಗ, ಸುಮಂತ್ ಬಿಲ್ಲವ ಅವರು ವೈಯಕ್ತಿಕ ಕಾರಣಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದು, ತಮ್ಮ ಖಾಸಗಿ ಜೀವನದ ನಿರ್ಧಾರವನ್ನು ಗೌರವಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಚಿತ್ರರಂಗದಲ್ಲಿ “ಮೊಗ್ಗಿನ ಮನಸ್ಸು”, “ಚಂಡ” ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳಲ್ಲಿ ನಟಿಸಿರುವ ಹಾಗೂ “ಬಿಗ್ ಬಾಸ್ ಸೀಸನ್ 8”ರಲ್ಲಿ ಗಮನಸೆಳೆದಿದ್ದ ಶುಭಾ ಪೂಂಜಾ ಅವರ ಈ ನಿರ್ಧಾರ ಅಭಿಮಾನಿಗಳಲ್ಲಿ ವಿಷಾದ ಮೂಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ಕಾನೂನು ಪ್ರಕ್ರಿಯೆ ಫ್ಯಾಮಿಲಿ ಕೋರ್ಟ್‌ನಲ್ಲಿ ನಡೆಯಲಿದ್ದು, ಮುಂದಿನ ವಿಚಾರಣೆಗೆ ದಂಪತಿ ಖುದ್ದಾಗಿ ಹಾಜರಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.



