ಕಲಬುರಗಿ: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲಾಗಿದೆ.
ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ರೆವೂರ್ ಭಾಷಣ ಮಾಡಿದ್ದರು. ಈ ವೇಳೆ ಅವರು ಮಾಡಿದ ಕೆಲ ಹೇಳಿಕೆಗಳು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಿವೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಅಜಗರ್ ಪೊಲೀಸ್ ದೂರು ಸಲ್ಲಿಸಿದ್ದರು.
ದೂರಿನ ಆಧಾರದ ಮೇಲೆ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾಷಣದಲ್ಲಿ ಪ್ರಚೋದನಕಾರಿ ಹಾಗೂ ದ್ವೇಷಪೂರಿತ ಅಂಶಗಳಿವೆ ಎಂಬ ಆರೋಪವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಮಾಜಿ ಸಚಿವ ದಿ. ಖಮರುಲ್ ಇಸ್ಲಾಂ ಕುರಿತು ಮಾಡಿದ ಹೇಳಿಕೆಗಳೇ ಪ್ರಕರಣ ದಾಖಲಿಸಲು ಪ್ರಮುಖ ಕಾರಣವಾಗಿದ್ದು, ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



