ಕೋಲಾರ: ಮುಳಬಾಗಿಲು ತಾಲೂಕಿನ ಆಲಂಗೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಪತಿಯ ಸಾವಿನ ಬಳಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದಾಳೆ.
ಆಂಧ್ರಪ್ರದೇಶ ಮೂಲದ ಬುಜ್ಜಮ್ಮ (22) ತನ್ನ ಮೂರು ವರ್ಷದ ಮಗಳು ಸರಸ್ವತಿ ಮತ್ತು ಒಂದು ವರ್ಷದ ಮಗು ಹೇಮಾಶ್ರಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಆಕೆಯನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬುಜ್ಜಮ್ಮ ಮತ್ತು ಪತಿ ಬಾಬು ಕಳೆದ ಒಂದು ವರ್ಷದಿಂದ ಆಲಂಗೂರಿನ ಮಾವಿನ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಆದರೆ 20 ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಬಾಬು ಮೃತಪಟ್ಟಿದ್ದರು. ಈ ಘಟನೆಯ ಬಳಿಕ ಬುಜ್ಜಮ್ಮ ತೀವ್ರ ಮಾನಸಿಕ ಆಘಾತ ಹಾಗೂ ಖಿನ್ನತೆಗೆ ಒಳಗಾಗಿದ್ದಳು ಎಂದು ತಿಳಿದುಬಂದಿದೆ.
ಕುಟುಂಬದ ಆಧಾರಸ್ತಂಭನನ್ನು ಕಳೆದುಕೊಂಡ ನೋವಿನಿಂದ ಬಳಲುತ್ತಿದ್ದ ಮಹಿಳೆ, ಕೊನೆಗೆ ತನ್ನ ಮಕ್ಕಳ ಜೀವ ಕಸಿದುಕೊಂಡು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ.
ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಪೊಲೀಸರು ಸವಿಸ್ತಾರ ತನಿಖೆ ನಡೆಸುತ್ತಿದ್ದಾರೆ.



