ಬೆಂಗಳೂರು: ಟೀ ಕುಡಿದು ಪಿಜಿಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಪಶ್ಚಿಮ ಬಂಗಾಳ ಮೂಲದ ಯುವಕನನ್ನು ವೈಟ್‌ಫೀಲ್ಡ್ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಂಧಿತನನ್ನು ಸೈಪುಲ್ ಮೊಂಡಲ್ ಎಂದು ಗುರುತಿಸಲಾಗಿದೆ. ಜೂನ್ 2ರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾ ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸೈಪುಲ್ ಮೊಂಡಲ್ ವೈಟ್‌ಫೀಲ್ಡ್ ಪ್ರದೇಶದಲ್ಲಿ ರಸ್ತೆ ಬದಿ ಕಸ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಜೂನ್ 2ರ ಮುಂಜಾನೆ ವಿದ್ಯಾರ್ಥಿನಿಯೊಬ್ಬರು ಟೀ ಕುಡಿದು ತಮ್ಮ ಪಿಜಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ, ಆಕೆಯನ್ನು ಗಮನಿಸಿದ ಆರೋಪಿ ಬಲವಂತವಾಗಿ ಎತ್ತಿಕೊಂಡು ಹೋಗಲು ಯತ್ನಿಸಿದ್ದಾನೆ. ಇದರಿಂದ ಭಯಗೊಂಡ ವಿದ್ಯಾರ್ಥಿನಿ ಜೋರಾಗಿ ಕಿರುಚಿಕೊಂಡಿದ್ದು, ಸುತ್ತಮುತ್ತಲಿನ ಜನರು ಸ್ಥಳಕ್ಕೆ ಧಾವಿಸಿದ್ದಾರೆ.
ಸ್ಥಳೀಯರು ಬರುತ್ತಿರುವುದನ್ನು ಗಮನಿಸಿದ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ವಿದ್ಯಾರ್ಥಿನಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ಘಟನೆಯ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.



