ನವದೆಹಲಿ: ನೀಟ್ (NEET-UG) ಪರೀಕ್ಷಾ ಅಕ್ರಮಗಳ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವಿದ್ಯಾರ್ಥಿನಿಯ ಸಾವಿನ ಕುರಿತು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಹಾಳುಗೆಡವಿದ್ದು, ಅದರ ದುಷ್ಪರಿಣಾಮವನ್ನು ಯುವ ಪೀಳಿಗೆ ಅನುಭವಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬರು ನಾಗ್ಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ 12 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತದಲ್ಲಿ ಶಿಕ್ಷಣ ವ್ಯವಸ್ಥೆ ನಿರಂತರವಾಗಿ ಕುಸಿದಿದ್ದು, ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯತ್ತ ಸಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ಮೃತ ವಿದ್ಯಾರ್ಥಿನಿ ವೈದ್ಯೆಯಾಗುವ ಕನಸು ಹೊಂದಿದ್ದಳು. ಆಕೆಯ ತಂದೆ ರೈತರಾಗಿದ್ದು, ಮಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಲು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸುಮಾರು 3 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಅಲ್ಲದೆ, ಮಗಳಿಗೆ ನಾಗ್ಪುರದಲ್ಲಿ ಕೋಚಿಂಗ್ ನೀಡಲು ಸ್ವತಃ ಅಲ್ಲೇ ಕೆಲಸಕ್ಕೂ ಸೇರಿಕೊಂಡಿದ್ದರು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ನೀಟ್ ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ಹಿನ್ನೆಲೆಯಲ್ಲಿ ಪರೀಕ್ಷಾ ಪ್ರಕ್ರಿಯೆಯ ಬಗ್ಗೆ ವಿದ್ಯಾರ್ಥಿನಿ ತೀವ್ರ ನಿರಾಸೆಗೆ ಒಳಗಾಗಿದ್ದಳು ಎನ್ನಲಾಗಿದೆ. ಇದೇ ಮಾನಸಿಕ ಒತ್ತಡ ಆಕೆಯನ್ನು ಆತ್ಮಹತ್ಯೆಯಂತಹ ಕಠಿಣ ನಿರ್ಧಾರಕ್ಕೆ ದೂಡಿದೆ ಎಂದು ಅವರು ಹೇಳಿದ್ದಾರೆ.
ಈ ಘಟನೆ ಕೇವಲ ಆತ್ಮಹತ್ಯೆಯ ಪ್ರಕರಣವಲ್ಲ. ದೇಶದ ಯುವಕರ ಭವಿಷ್ಯವನ್ನು ನಿರ್ಲಕ್ಷಿಸಿರುವ ಭ್ರಷ್ಟ ಮತ್ತು ವಿಫಲ ವ್ಯವಸ್ಥೆಯ ಪರಿಣಾಮ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಭರವಸೆ, ಪರಿಶ್ರಮ ಮತ್ತು ಕನಸುಗಳನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.



