ತುಮಕೂರು: ವಿದೇಶಿ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇಲೆ ತುಮಕೂರಿನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ರಹಸ್ಯ ಮಾಹಿತಿಯ ಆಧಾರದ ಮೇಲೆ ತುಮಕೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ತುಮಕೂರಿನ ಶ್ರೀರಾಮನಗರ ನಿವಾಸಿ ಅಲ್ಲಾಬಕ್ಷು (24) ಎಂದು ಗುರುತಿಸಲಾಗಿದೆ.
ಆರೋಪಿಯು ಸಾಮಾಜಿಕ ಜಾಲತಾಣ ‘ಎಕ್ಸ್’ (X) ಮೂಲಕ ವಿದೇಶಿ ಶಂಕಿತ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ದೇಶದ ಆಂತರಿಕ ವಿಚಾರಗಳಿಗೆ ಸಂಬಂಧಿಸಿದ ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದನೆಂದು ಆರೋಪಿಸಲಾಗಿದೆ. ದೇಶ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದ ಚಾಟಿಂಗ್ ಕೂಡ ನಡೆಸುತ್ತಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.
ಕೇಂದ್ರ ಸಂಸ್ಥೆಗಳು ಆತನ ಆನ್‌ಲೈನ್ ಚಟುವಟಿಕೆಗಳ ಮೇಲೆ ನಿಗಾ ವಹಿಸಿ, ಮಾಹಿತಿಯನ್ನು ರಾಜ್ಯ ಪೊಲೀಸರಿಗೆ ಹಂಚಿಕೊಂಡಿದ್ದವು. ಇದರ ಆಧಾರದ ಮೇಲೆ ಗುರುವಾರ ರಾತ್ರಿ ಕ್ಯಾತಸಂದ್ರ ಪ್ರದೇಶದಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಶಂಕಿತನ ಬಗ್ಗೆಯೂ ಮಾಹಿತಿ ದೊರೆತಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಕರಣವನ್ನು ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.



