ಬೆಂಗಳೂರು: ಸಚಿವರ ಖಾತೆ ಹಂಚಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನಲ್ಲಿ ಅಸಮಾಧಾನದ ಹೊಗೆ ಎದ್ದಿರುವ ನಡುವೆಯೇ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರ ಅಸಮಾಧಾನ ಶಮನಗೊಳಿಸಲು ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿದ್ದಕ್ಕೆ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದ ಮುನಿಯಪ್ಪ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ತಮ್ಮ ಅಸಮಾಧಾನವನ್ನು ವಿವರಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ರಾಹುಲ್ ಗಾಂಧಿ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವರ ಖಾತೆ ಹಂಚಿಕೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕೈತಪ್ಪಿದ ಹಿನ್ನೆಲೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿರುವ ಬೆಳವಣಿಗೆಯ ಜೊತೆಗೆ ಮುನಿಯಪ್ಪ ಅವರ ಅಸಮಾಧಾನವೂ ಹೈಕಮಾಂಡ್ ಗಮನಕ್ಕೆ ಬಂದಿದೆ.
ಬಳಿಕ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾದ ಮುನಿಯಪ್ಪ, ಖಾತೆ ಹಂಚಿಕೆ ಕುರಿತ ತಮ್ಮ ಆಕ್ಷೇಪಣೆಗಳನ್ನು ದಾಖಲಿಸಿದ್ದಾರೆ. ಈ ವೇಳೆ ಉಂಟಾಗಿರುವ ಗೊಂದಲವನ್ನು ಸರಿಪಡಿಸುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮುನಿಯಪ್ಪ, “ರಾಹುಲ್ ಗಾಂಧಿ ಗೊಂದಲ ಸರಿಪಡಿಸುವುದಾಗಿ ಹೇಳಿದ್ದಾರೆ. ನಾನು ಸಂತೃಪ್ತನಾಗಿದ್ದೇನೆ” ಎಂದು ಪ್ರತಿಕ್ರಿಯೆ ನೀಡಿದರು. ಹೀಗಾಗಿ ರಾಜೀನಾಮೆ ಕುರಿತ ಚರ್ಚೆಗಳಿಗೆ ತಾತ್ಕಾಲಿಕ ತೆರೆ ಬಿದ್ದಂತಾಗಿದೆ.
ಇದಕ್ಕೂ ಮೊದಲು ಮಾತನಾಡಿದ್ದ ಮುನಿಯಪ್ಪ, ತಾವು ಎಂಟು ಬಾರಿ ಜನಪ್ರತಿನಿಧಿಯಾಗಿ ಆಯ್ಕೆಯಾಗಿರುವ ಹಿರಿಯ ನಾಯಕನಾಗಿದ್ದು, ಸೀನಿಯಾರಿಟಿ ಮತ್ತು ಅನುಭವಕ್ಕೆ ತಕ್ಕಂತೆ ಖಾತೆ ಹಂಚಿಕೆ ಆಗಬೇಕಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಸಮಾಜ ಕಲ್ಯಾಣ ಅಥವಾ ಕೃಷಿ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ನೀಡುವಂತೆ ಮನವಿ ಮಾಡಿದ್ದರೂ ಅದನ್ನು ಪರಿಗಣಿಸಲಾಗಿಲ್ಲ ಎಂದು ಅವರು ಬೇಸರ ಹೊರಹಾಕಿದ್ದರು.



