ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾತರದಿಂದ ಎದುರು ನೋಡುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಇಂದು ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶ ಪ್ರಕಟಣೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹ ಅಧ್ಯಕ್ಷರೂ ಆಗಿರುವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಅಧಿಕೃತ ವಿವರಗಳು, ಒಟ್ಟಾರೆ ಸಾಧನೆ ಹಾಗೂ ಟಾಪರ್ಗಳ ಪಟ್ಟಿಯನ್ನು ಪ್ರಕಟಿಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ, ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 2 ಗಂಟೆಯಿಂದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Register Number) ನಮೂದಿಸುವ ಮೂಲಕ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಹಾಗೂ ರ್ಯಾಂಕ್ ಕಾರ್ಡ್ ಅನ್ನು ವೀಕ್ಷಿಸಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಫಲಿತಾಂಶ ಪ್ರಕಟವಾದ ತಕ್ಷಣ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಒಂದೇ ವೇಳೆ ವೆಬ್ಸೈಟ್ಗೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಸರ್ವರ್ ಮೇಲೆ ಹೆಚ್ಚಿನ ಒತ್ತಡ ಉಂಟಾಗಬಹುದು. ಇದರಿಂದ ವೆಬ್ಸೈಟ್ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆ ಇದ್ದು, ಅಂತಹ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಆತಂಕಪಡದೆ ಸ್ವಲ್ಪ ಸಮಯದ ಬಳಿಕ ಮತ್ತೆ ಪ್ರಯತ್ನಿಸುವಂತೆ ಕೆಇಎ ಮನವಿ ಮಾಡಿದೆ.



