ಬೀದರ್: ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ಅವರಿಗೆ ಕೋರ್ಟ್‌ಗೆ ಗೈರುಹಾಜರಾದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರಂಟ್ (NBW) ಜಾರಿಯಾಗಿದೆ. ಈ ಬೆಳವಣಿಗೆಯಿಂದ ಶಾಸಕ ಸಲಗರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ.
2023ರಲ್ಲಿ ನಡೆದಿದ್ದ ಗೋಹತ್ಯೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯ ವಿಚಾರಣೆಗೆ ಶಾಸಕ ಶರಣು ಸಲಗರ್ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಪ್ರಕರಣದ ವಿಚಾರಣೆ ಪ್ರಗತಿಯಲ್ಲಿದ್ದು, ಸಾಕ್ಷ್ಯ ದಾಖಲಾತಿ ಪ್ರಕ್ರಿಯೆ ನಡೆಯಬೇಕಿತ್ತು.
2023ರ ಜುಲೈ 1ರಂದು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಶಾಸಕ ಶರಣು ಸಲಗರ್ ಹಾಗೂ ಅವರ ಬೆಂಬಲಿಗರು ಸ್ಥಳಕ್ಕೆ ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಮುಸ್ಲಿಂ ಸಮುದಾಯದ ಮನೆಯೊಂದರ ಬಳಿ ಗೋಹತ್ಯೆ ತಡೆಯುವ ವಿಚಾರವಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡು ಗಲಾಟೆ ನಡೆದಿತ್ತು.
ಘಟನೆಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಇದೀಗ ನ್ಯಾಯಾಲಯದ ವಿಚಾರಣೆಯ ಹಂತದಲ್ಲಿದೆ. ಈ ನಡುವೆ ವಿಚಾರಣೆಗೆ ಗೈರಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ಶಾಸಕ ಸಲಗರ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಪ್ರಕರಣದ ಮುಂದಿನ ವಿಚಾರಣೆ ವೇಳೆ ಶಾಸಕ ಶರಣು ಸಲಗರ್ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದ್ದು, ಕಾನೂನು ಪ್ರಕ್ರಿಯೆ ಮುಂದುವರಿಯಲಿದೆ.



