ತುಮಕೂರು: ನೂತನ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ. ಪರಮೇಶ್ವರ್ ಅವರು ಶನಿವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಶುಭ ಕಾರ್ಯ ಅಥವಾ ಹೊಸ ಜವಾಬ್ದಾರಿಯನ್ನು ಆರಂಭಿಸುವ ಮುನ್ನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯುವುದು ತಮ್ಮ ಸಂಪ್ರದಾಯವಾಗಿದೆ ಎಂದು ಹೇಳಿದರು. ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ್ದು, ಶ್ರೀಗಳ ಆಶೀರ್ವಾದ ಪಡೆದು ಕಾರ್ಯಾರಂಭ ಮಾಡಿದ್ದೇನೆ ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿ ನಾಲ್ಕು ದಿನಗಳಾಗಿದ್ದು, ರಾಜ್ಯದ ಅಭಿವೃದ್ಧಿಗಾಗಿ ಹಲವು ಯೋಜನೆಗಳ ನೀಲನಕ್ಷೆ ಸಿದ್ಧಪಡಿಸಿದ್ದಾರೆ. ಜನರಿಗೆ ಉತ್ತಮ ಆಡಳಿತ ನೀಡುವ ಉದ್ದೇಶದಿಂದ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ವೇಗ ನೀಡಲಾಗುವುದು ಎಂದು ತಿಳಿಸಿದರು.
ತುಮಕೂರು ಜಿಲ್ಲೆಯಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದು, ಅವುಗಳನ್ನು ಶೀಘ್ರವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಎತ್ತಿನಹೊಳೆ ಯೋಜನೆಯ ನೀರು ಜೂನ್-ಜುಲೈ ವೇಳೆಗೆ ಬರಬೇಕಾಗಿದ್ದರೂ, ಅರಣ್ಯ ಇಲಾಖೆಯ ಕೆಲ ತಾಂತ್ರಿಕ ಅಡಚಣೆಗಳಿಂದ ವಿಳಂಬವಾಗಿದೆ. ಸಮಸ್ಯೆ ಬಗೆಹರಿಸಿ ಶೀಘ್ರವೇ ನೀರು ಹರಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಕಂದಾಯ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿರುವ ತಾವು ರಾಜ್ಯದ 97 ಲಕ್ಷ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡಲಿದ್ದೇವೆ ಎಂದರು. ರೈತರು ಭೂ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸಿ, ತಮ್ಮ ಭೂಮಿಯ ಮೇಲೆ ಸ್ಪಷ್ಟ ಹಕ್ಕು ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜನಪರ ಆಡಳಿತ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಪರಮೇಶ್ವರ್ ತಿಳಿಸಿದರು.



