ಕಲಬುರಗಿ: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರ ಪರವಾಗಿ ಕ್ರಮ ಕೈಗೊಳ್ಳುವುದಾಗಿ ಹೇಳಿ ಲಂಚ ಪಡೆಯುತ್ತಿದ್ದ ಮಹಿಳಾ ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಜ್ಯೋತಿ ಅವರು 10 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಂದ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಚಿಂದಿ ಆಯುವ ಮಹಿಳೆಯ ಮಗಳ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣವು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಪ್ರಕರಣದ ಚಾರ್ಜ್‌ಶೀಟ್ ಸಲ್ಲಿಕೆ ಹಾಗೂ ಕೇಸ್ ದೂರುದಾರರ ಪರವಾಗಿ ನಡೆಯುವಂತೆ ನೋಡಿಕೊಳ್ಳುವುದಾಗಿ ಹೇಳಿ ಜ್ಯೋತಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ದೂರುದಾರರ ಮಾಹಿತಿಯ ಮೇರೆಗೆ ಲೋಕಾಯುಕ್ತ ಇನ್‌ಸ್ಪೆಕ್ಟರ್ ಅರುಣ್ ಮುರಗುಂಡಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಹಣ ಸ್ವೀಕರಿಸುತ್ತಿದ್ದ ವೇಳೆ ಕಾನ್‌ಸ್ಟೇಬಲ್ ಜ್ಯೋತಿ ಅವರನ್ನು ವಶಕ್ಕೆ ಪಡೆದಿದೆ.
ಇದೇ ಪ್ರಕರಣದಲ್ಲಿ ಮತ್ತೊಬ್ಬ ಎಎಸ್‌ಐ ಪಾತ್ರವೂ ಶಂಕಿಸಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುವ ವೇಳೆ ಅವರು ಠಾಣೆಯಿಂದ ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಎಎಸ್‌ಐಗಾಗಿ ಶೋಧ ಕಾರ್ಯ ಮುಂದುವರಿದಿದೆ.



