ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮನಚೋಡ ಗ್ರಾಮದ ಬಳಿ ಭಾರೀ ಮಳೆಯಿಂದ ಕಿರು ಸೇತುವೆ ಕುಸಿದ ಘಟನೆ ನಡೆದಿದೆ.
ಚಿಮ್ಮನಚೋಡ–ನರನಾಳ ಗ್ರಾಮದ ನಡುವೆ ಇರುವ ಈ ಸೇತುವೆ ಕುಸಿತಗೊಂಡ ಪರಿಣಾಮ ಚಿಂಚೋಳಿಯಿಂದ ಭಾಲ್ಕಿಗೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸ್ಥಳೀಯರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ.
ಇದೇ ವೇಳೆ ಬೆಡಕಪಳ್ಳಿ ಗ್ರಾಮದ 20ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಗ್ರಾಮಸ್ಥರು ತಕ್ಷಣವೇ ಸೂಕ್ತ ಪರಿಹಾರ ಮತ್ತು ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಪ್ರವೇಶಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.



