ಆನೇಕಲ್: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ವೇಗವಾಗಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ಛಿದ್ರಗೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ತಕ್ಷಣ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಸಮಯಪ್ರಜ್ಞೆ ಮತ್ತು ನಿಯಂತ್ರಿತ ಚಾಲನೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಹೊಸಕೋಟೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



