ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನೇ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ. ಈ ಆಯ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸಂತಸ ತಂದಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ನಾಗರಾಜ್ ಅವರನ್ನು ಹಾಗೂ ವಿಧಾನ ಪರಿಷತ್ಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಈ ಎಲ್ಲಾ ಮುಖಂಡರು ಪಕ್ಷದ ಸಂಘಟನೆಗೆ ವಿವಿಧ ರೀತಿಯಲ್ಲಿ ತೊಡಗಿಸಿಕೊಂಡಿದ್ದವರು ಎಂದು ಹೇಳಿದರು.
ರಾಜ್ಯಸಭೆ ಅಭ್ಯರ್ಥಿ ಎಂ.ನಾಗರಾಜ್ ಅವರು, ಅತ್ಯಂತ ಹಿಂದುಳಿದ ಕುರುಬ ಸಮಾಜಕ್ಕೆ ಸೇರಿದವರು. ಆರ್ಎಸ್ಎಸ್ ಮತ್ತು ಎಬಿವಿಪಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಪಕ್ಷದ ಸಂಘಟನೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದವರು. ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದರು. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಿದ್ದಾಗ ಕೆಪಿಎಸ್ಸಿಯಲ್ಲೂ ಉತ್ತಮ ಸೇವೆ ಸಲ್ಲಿಸಿದ್ದರು ಎಂದು ಹೇಳಿದರು.
ವಿಧಾನ ಪರಿಷತ್ ಅಭ್ಯರ್ಥಿ ಲಿಂಗರಾಜ ಪಾಟೀಲ್ ಅವರು 37-38 ವರ್ಷಗಳಿಂದ ಸತತವಾಗಿ ಸಂಘಟನೆಯ ವಿವಿಧ ಜವಾಬ್ದಾರಿಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ನಿರ್ವಹಿಸಿದ್ದಾರೆ. ಸಂಘಟನೆಗೆ ಹಗಲು ರಾತ್ರಿ ದುಡಿದಿದ್ದಾರೆ. ಎಬಿವಿಪಿಯಲ್ಲೂ ಸೇವೆ ಸಲ್ಲಿಸಿದ್ದಾರೆ ಎಂದರು.
ರಘು ಕೌಟಿಲ್ಯ ಅವರು ಅತ್ಯಂತ ಹಿಂದುಳಿದ ಮಡಿವಾಳ ಸಮಾಜಕ್ಕೆ ಸೇರಿದವರು. ಶಿಕ್ಷಣ ಮತ್ತು ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ಈ ಎಲ್ಲರ ಆಯ್ಕೆ ಸಂತೋಷ ತಂದಿದೆ ಎಂದು ವಿವರಿಸಿದರು.



