ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಿ ಅವರ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕು ಎಂದು ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ನಂ.1ರ ಮುಖ್ಯೋಪಾಧ್ಯಾಯ ಡಿ.ಎನ್. ದೊಡ್ಡಮನಿ ಹೇಳಿದರು.
ಶನಿವಾರ ಎಸ್‌ಡಿಎಂಸಿ ಸಹಯೋಗದಲ್ಲಿ ಆಯೋಜಿಸಿದ್ದ ದಾಖಲಾತಿ ಆಂದೋಲನದ ಅಂಗವಾಗಿ ಮಕ್ಕಳೊಂದಿಗೆ ಪ್ರಭಾತ ಫೇರಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ, ಸಮವಸ್ತ್ರ, ಕ್ಷೀರಭಾಗ್ಯ, ಪಠ್ಯಪುಸ್ತಕ ಸೇರಿದಂತೆ ಎಲ್ಲ ಸೌಲಭ್ಯಗಳು ಉಚಿತವಾಗಿ ದೊರೆಯುತ್ತಿವೆ. ಕಳೆದ ವರ್ಷದಿಂದ ಇಂಗ್ಲಿಷ್ ಮಾಧ್ಯಮ ಶಿಕ್ಷಣವೂ ಆರಂಭವಾಗಿದೆ ಎಂದು ಡಿ.ಎನ್. ದೊಡ್ಡಮನಿ ಹೇಳಿದರು.
ಎಸ್‌ಡಿಎಂಸಿ ಅಧ್ಯಕ್ಷ ಯಲ್ಲಪ್ಪ ಶಿರಬಡಗಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಕಲಿತ ಮಕ್ಕಳು ಇಂದು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಪಾಲಕರು ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಶಿಕ್ಷಕರಾದ ಎಸ್.ಎನ್. ಲಮಾಣಿ, ರಾಜೇಶ್ವರಿ ಅಡರಕಟ್ಟಿ, ಇ.ಎಚ್. ಪೀಟರ್, ಎಸ್.ಎಸ್. ಮಹಾಲಿಂಗಶೆಟ್ಟರ, ಸವಿತಾ ಬೋಮಲೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.



