ಬೆಂಗಳೂರು: ಅಪ್ರಾಪ್ತ ಬಾಲಕನೊಬ್ಬ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಗರದ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶನಿವಾರ ಸಂಜೆ 6.45ರ ಸುಮಾರಿಗೆ ಬಿಡಿಎ ಪಾರ್ಕ್ ಸಮೀಪ ಈ ಅಪಘಾತ ಸಂಭವಿಸಿದೆ. ಅಪ್ರಾಪ್ತ ಬಾಲಕ ಚಾಲನೆ ಮಾಡುತ್ತಿದ್ದ ಕಾರು, ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಾದ ಅರುಣ್ ಕುಮಾರ್ ಹಾಗೂ ವಿನಯ್ ಗಾಯಗೊಂಡಿದ್ದಾರೆ.
ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಆದರೆ ಸ್ಥಳೀಯರು ತಕ್ಷಣವೇ ಕಾರನ್ನು ಅಡ್ಡಗಟ್ಟಿ ಚಾಲಕನನ್ನು ಹಿಡಿದಿದ್ದಾರೆ. ಬಳಿಕ ಆತ ಅಪ್ರಾಪ್ತ ಬಾಲಕ ಎಂಬುದು ತಿಳಿದುಬಂದಿದೆ.
ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಬಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಅಪ್ರಾಪ್ತನಿಗೆ ವಾಹನ ನೀಡಿದ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಸಂಬಂಧ ಅಪ್ರಾಪ್ತ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



