ಚಿಕ್ಕಮಗಳೂರು: ಜಿಲ್ಲೆಯ ಹಾಲೇನಹಳ್ಳಿಯಲ್ಲಿ 55 ವರ್ಷದ ಗೃಹಿಣಿಯೊಬ್ಬರು ಗುಂಡೇಟಿನಿಂದ ಮೃತಪಟ್ಟಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಘಟನೆ ನಡೆದಿದ್ದು, ಪ್ರಕರಣದ ಸುತ್ತ ನಿಗೂಢತೆ ಆವರಿಸಿದೆ.
ಮೃತ ಸುಮ ಅವರು ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಮೃತರ ಪತಿ ರಾಜೇಶ್ ಉದ್ಯಮಿಯಾಗಿದ್ದು, ಘಟನೆ ವೇಳೆ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಡೆತ್‌ನೋಟ್‌ನಲ್ಲಿರುವ ಅಂಶಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬಸವನಹಳ್ಳಿ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಇದು ಆತ್ಮಹತ್ಯೆಯೋ ಅಥವಾ ಬೇರೆ ಯಾವುದೇ ಕಾರಣವೋ ಎಂಬ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಳಿಕ ಸಾವಿನ ನಿಖರ ಕಾರಣ ಸ್ಪಷ್ಟವಾಗುವ ಸಾಧ್ಯತೆ ಇದೆ.



