ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಗೊಜನೂರ ಗ್ರಾಮದ ಸಮೀಪ ಗದಗ-ಲಕ್ಷ್ಮೇಶ್ವರ ಸಂಪರ್ಕ ಕಲ್ಪಿಸುವ ಕಾರವಾರ-ಇಳಕಲ್ ರಾಜ್ಯ ಹೆದ್ದಾರಿಯಲ್ಲಿ 41 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಗ್ರಾಪಂ ಮಾಜಿ ಸದಸ್ಯ ಶಿವರಾಜಗೌಡ ಪಾಟೀಲ ಆಗ್ರಹಿಸಿದ್ದಾರೆ.
ಮಳೆಗಾಲದಲ್ಲಿ ಹಳ್ಳದ ನೀರು ಸೇತುವೆ ಮೇಲೆ ಹರಿದು ವಾಹನ ಸವಾರರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕಿರು ಸೇತುವೆ ನಿರ್ಮಾಣ ಕಾರ್ಯ ಆರಂಭಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಆದರೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಸೇತುವೆ ಪಕ್ಕದ ಕಚ್ಚಾ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟಕರವಾಗಿದೆ. ಮಳೆ ಬಂದರೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ದೂರಿದ್ದಾರೆ.
ರಾಜ್ಯ ಹೆದ್ದಾರಿಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿರುವುದರಿಂದ ಗುತ್ತಿಗೆದಾರರು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಈ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳು ಗಮನ ಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.



