ಕಲಬುರಗಿ: ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ವೃತ್ತದ ಬಳಿ ಇರುವ ಬಾರ್ & ರೆಸ್ಟೋರೆಂಟ್ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಬಾರ್ನ ಮೇಲಂತಸ್ತಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಜ್ವಾಲೆಗಳು ವ್ಯಾಪಿಸಿ ಕಟ್ಟಡದ ಮೇಲ್ಭಾಗ ಧಗಧಗನೆ ಹೊತ್ತಿ ಉರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ದೊರೆತ ಕೂಡಲೇ ಎರಡು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿವೆ. ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕ್ರಮದಿಂದ ಬೆಂಕಿ ಅಕ್ಕಪಕ್ಕದ ಕಟ್ಟಡಗಳಿಗೆ ಹರಡುವ ದೊಡ್ಡ ಅನಾಹುತ ತಪ್ಪಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಪ್ರಾಥಮಿಕ ತನಿಖೆಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



