ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲ ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು–ಸಿಡಿಲು ಸಹಿತ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ 30 ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಮುನ್ಸೂಚನೆ ಇದೆ.
ಭಾರೀ ಮಳೆ ಹಾಗೂ ಬಲವಾದ ಗಾಳಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಮತ್ತು ಹಳೆಯ ಕಟ್ಟಡಗಳು ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಹವಾಮಾನ ಇಲಾಖೆ ಸೂಚಿಸಿದೆ.



