ರಾಮನಗರ: ರೈತರ ತೀವ್ರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿದೆ.
ಯೋಜನಾ ವ್ಯಾಪ್ತಿಯ ಒಂಬತ್ತು ಕಂದಾಯ ಗ್ರಾಮಗಳ ಪೈಕಿ ಪ್ರಾರಂಭಿಕ ಹಂತದಲ್ಲಿ ಮೂರು ಗ್ರಾಮಗಳ 518 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಬಿಡದಿ ಹೋಬಳಿಯ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮಗಳ ಸುಮಾರು 754 ರೈತರಿಗೆ ಸೇರಿದ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.
ಭೂಸ್ವಾಧೀನಕ್ಕೆ ಒಳಪಡುವ ರೈತರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪರಿಹಾರವನ್ನು ಪಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, ಪ್ರತಿ ಎಕರೆ ಭೂಮಿಗೆ ಕನಿಷ್ಠ 2.14 ಕೋಟಿ ರೂ. ಪರಿಹಾರ ದರವನ್ನು ನಿಗದಿಪಡಿಸಲಾಗಿದೆ.
ಕಳೆದ ಒಂದೂವರೆ ವರ್ಷಗಳಿಂದ ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸುತ್ತಿದ್ದಾರೆ. ಆದಾಗ್ಯೂ, ಯೋಜನೆಯನ್ನು ಮಹತ್ವಾಕಾಂಕ್ಷಿ ಯೋಜನೆಯಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಟೌನ್‌ಶಿಪ್ ನಿರ್ಮಾಣ ಪ್ರಕ್ರಿಯೆಯನ್ನು ಮುಂದುವರಿಸುವಲ್ಲಿ ದೃಢ ನಿಲುವು ತಾಳಿದ್ದಾರೆ.
ಇನ್ನೊಂದೆಡೆ, ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಸರ್ಕಾರದ ಅಧಿಸೂಚನೆಯ ಬಳಿಕ ಬಿಡದಿ ಟೌನ್‌ಶಿಪ್ ಯೋಜನೆ ಸುತ್ತ ರಾಜಕೀಯ ಹಾಗೂ ರೈತ ಹೋರಾಟದ ಚಟುವಟಿಕೆಗಳು ಇನ್ನಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.



