ನವದೆಹಲಿ: ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶುಕ್ರವಾರ ಮುಂಜಾನೆ ಸುಮಾರು 2.30 ಗಂಟೆಗೆ ಐದು ಮಹಡಿಗಳ ವಸತಿ ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದ್ದು, ಚಾರ್ಜ್ಗೆ ಇಡಲಾಗಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸೇರಿದಂತೆ ಏಳು ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿವೆ.
ಬೆಂಕಿಯ ಜತೆಗೆ ಕಟ್ಟಡದೊಳಗೆ ದಟ್ಟ ಹೊಗೆ ಆವರಿಸಿದ್ದರಿಂದ ನಿವಾಸಿಗಳು ಹೊರಬರಲು ಸಾಧ್ಯವಾಗದೇ ಸಿಲುಕಿಕೊಂಡಿದ್ದರು. ಮಾಹಿತಿ ಪಡೆದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಅಂಬುಲೆನ್ಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಈ ವೇಳೆ ಎಂಟು ಮಂದಿಯನ್ನು ರಕ್ಷಿಸಿ ಸಫ್ದರ್ಜಂಗ್ ಆಸ್ಪತ್ರೆ ಹಾಗೂ ಏಮ್ಸ್ ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ 22 ವರ್ಷದ ಯುವಕ ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.



