ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಉಡುಪಿ ಭೇಟಿಗೆ ವಿರೋಧ ವ್ಯಕ್ತಪಡಿಸಿ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ ಕರವೇ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಸರ್ಕಾರದ ನಿಲುವನ್ನು ಖಂಡಿಸಿ ಕಾರ್ಯಕರ್ತರು ಉಡುಪಿಯ ಬಲೈಪಾದೆ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
ಮುಖ್ಯಮಂತ್ರಿ ವಿಜಯ್ ಅವರ ಆಗಮನ ವಿರೋಧಿಸಿ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ತಕ್ಷಣ ತಡೆದು ನಿಯಂತ್ರಿಸಿದರು. ನಂತರ ಅವರನ್ನು ವಶಕ್ಕೆ ಪಡೆದು ಸ್ಥಳಾಂತರಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದ್ದು, ಶಾಂತಿ-ಸುವ್ಯವಸ್ಥೆ ಕಾಪಾಡಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.



