ಬೆಳಗಾವಿ: ಬಹುಕೋಟಿ ರೂಪಾಯಿ ಹೂಡಿಕೆ ವಂಚನೆ ಪ್ರಕರಣದ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ್‌ಗೆ 93ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯವು ₹3 ಲಕ್ಷದ ವೈಯಕ್ತಿಕ ಬಾಂಡ್ ಸಲ್ಲಿಸುವಂತೆ ಹಾಗೂ ವಿಚಾರಣೆ ಪೂರ್ಣಗೊಳ್ಳುವವರೆಗೆ ದೇಶ ತೊರೆಯಬಾರದು ಎಂಬ ಷರತ್ತು ವಿಧಿಸಿ ಜಾಮೀನು ನೀಡಿದೆ.
ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕರಾಗಿರುವ ಶಿವಾನಂದ ನೀಲಣ್ಣವರ್ ವಿರುದ್ಧ ಸಾವಿರಾರು ಹೂಡಿಕೆದಾರರಿಗೆ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಭಾರೀ ಪ್ರಮಾಣದ ಹಣ ಸಂಗ್ರಹಿಸಿ ವಂಚನೆ ಎಸಗಿದ ಆರೋಪ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು.
ಆರೋಪಗಳ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅಥವಾ ಭಾರತೀಯ ಷೇರುಪೇಟೆ ಮತ್ತು ವಿನಿಮಯ ಮಂಡಳಿ (ಸೆಬಿ)ಯಿಂದ ಯಾವುದೇ ಅಧಿಕೃತ ಅನುಮೋದನೆ ಪಡೆಯದೇ, ಹೆಚ್ಚಿನ ಲಾಭಾಂಶದ ಭರವಸೆ ನೀಡಿ ಹೂಡಿಕೆದಾರರಿಂದ ಸಾವಿರಾರು ಕೋಟಿ ರೂಪಾಯಿ ಹಣ ಸಂಗ್ರಹಿಸಲಾಗಿತ್ತು.
ಸುಮಾರು ₹4,500 ಕೋಟಿ ಮೌಲ್ಯದ ವಂಚನೆ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು, ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಶಿವಾನಂದ ನೀಲಣ್ಣವರ್ ಸೋಮವಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.



