ನವದೆಹಲಿ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ವೊಬ್ಬರು ಮೃತಪಟ್ಟ ಘಟನೆ ದೆಹಲಿಯ ಕಾಶ್ಮೀರಿ ಗೇಟ್ ಐಎಸ್ಬಿಟಿ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ರಾಜಸ್ಥಾನ ಮೂಲದ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಶನಿವಾರ ಶಾಂತಿ ವನದಿಂದ ಚಾಂದಗಿ ರಾಮ್ ಕಡೆಗೆ ತೆರಳುವ ರಸ್ತೆಯ ಬದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ವೇಳೆ ವೇಗವಾಗಿ ಬಂದ ಸ್ಕೂಟರ್ವೊಂದು ಅನಿಲ್ ಕುಮಾರ್ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರು ರಸ್ತೆಯ ಮೇಲೆ ಬಿದ್ದಿದ್ದು, ಅದೇ ಸಮಯದಲ್ಲಿ ಹಿಂದಿನಿಂದ ಬರುತ್ತಿದ್ದ ಮಿನಿ ಟ್ರಕ್ ಅವರ ಮೇಲೆ ಹರಿದಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ಬಳಿಕ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುವನ್ನು ತಕ್ಷಣವೇ ಸಿವಿಲ್ ಲೈನ್ಸ್ನ ಸುಶ್ರುತ್ ಟ್ರಾಮಾ ಸೆಂಟರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅನಿಲ್ ಕುಮಾರ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ತಕ್ಷಣ ಸ್ಕೂಟರ್ನಲ್ಲಿದ್ದ ಮೂವರು ಸವಾರರು ಸ್ಥಳದಿಂದ ಪರಾರಿಯಾಗಿದ್ದು, ಮಿನಿ ಟ್ರಕ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಾರಿಯಾಗಿರುವ ಸ್ಕೂಟರ್ ಸವಾರರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ.
ಮೃತ ಅನಿಲ್ ಕುಮಾರ್ ಅವರು ಮೂಲತಃ ರಾಜಸ್ಥಾನದ ಕೋಟ್ಪುತ್ಲಿ ಜಿಲ್ಲೆಯ ಬೆಹ್ರೋರ್ ಪ್ರದೇಶದ ಜಾತಗನ್ವಾರ ಗ್ರಾಮದ ನಿವಾಸಿಯಾಗಿದ್ದು, ದೆಹಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಛತ್ತರಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು ಕರ್ತವ್ಯದಲ್ಲಿದ್ದಾಗಲೇ ಅಪಘಾತಕ್ಕೀಡಾಗಿ ಮೃತಪಟ್ಟಿರುವುದು ಪೊಲೀಸ್ ಇಲಾಖೆಯಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.



