HomeGadag Newsಸಚಿವ ಸ್ಥಾನಕ್ಕಾಗಿ ಜಿ.ಎಸ್. ಪಾಟೀಲ ಪರ ಯುವಕರ ಗುಡುಗು: ಹೈಕಮಾಂಡ್‌ಗೆ ಎಚ್ಚರಿಕೆ

ಸಚಿವ ಸ್ಥಾನಕ್ಕಾಗಿ ಜಿ.ಎಸ್. ಪಾಟೀಲ ಪರ ಯುವಕರ ಗುಡುಗು: ಹೈಕಮಾಂಡ್‌ಗೆ ಎಚ್ಚರಿಕೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಡಂಬಳ: ರೋಣ ವಿಧಾನಸಭಾ ಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲ ಅವರು ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದರ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಇಂತಹ ಜನಪರ ನಾಯಕರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಯುವಕರ ನೇತೃತ್ವದಲ್ಲಿ ದೊಡ್ಡ ಪ್ರಮಾಣದ ಹೋರಾಟ ನಡೆಸಲಾಗುವುದು ಎಂದು ಯುವ ಕಾಂಗ್ರೆಸ್ ಮುಖಂಡ ವೆಂಕಟೇಶ ಗದಗಿನ ಎಚ್ಚರಿಸಿದರು.

ಡಂಬಳದ ಐತಿಹಾಸಿಕ ಪ್ರವಾಸಿ ಮಂದಿರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂಗಟಾಲೂರು ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳನ್ನು ತುಂಬಿಸಿ ರೈತರ ಬದುಕಿಗೆ ಆಶಾಕಿರಣವಾಗಿರುವ ಜಿ.ಎಸ್. ಪಾಟೀಲರು ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮಿಸಿದ್ದಾರೆ. ಡಂಬಳದಲ್ಲಿ ತೋಟಗಾರಿಕಾ ಕಾಲೇಜು ಸ್ಥಾಪನೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಮುಂಚೂಣಿಯಲ್ಲಿದ್ದಾರೆ. ಆದ್ದರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಯುವ ಕಾಂಗ್ರೆಸ್ ಮುಖಂಡ ಪ್ರಕಾಶ ಮೇಗೂರ ಮಾತನಾಡಿ, ರೋಣಕ್ಕೆ ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಅವರು ಜಿ.ಎಸ್. ಪಾಟೀಲರು ಸಚಿವ ಸ್ಥಾನಕ್ಕೆ ಅರ್ಹರು ಎಂದು ಹೇಳಿದ್ದರು. ಆ ಭರವಸೆಯನ್ನು ಇದೀಗ ಈಡೇರಿಸುವ ಸಮಯ ಬಂದಿದೆ. ರೈತರು, ಬಡವರು ಹಾಗೂ ಕಾರ್ಮಿಕರ ಪರವಾಗಿ ನಿರಂತರವಾಗಿ ಕೆಲಸ ಮಾಡಿದ ನಾಯಕನಿಗೆ ಸಚಿವ ಸ್ಥಾನ ನೀಡುವುದರಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಲಿದೆ ಎಂದು ಹೇಳಿದರು.

ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಪಕ್ಷದ ಅನೇಕ ಯುವ ಕಾರ್ಯಕರ್ತರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಎಚ್ಚರಿಸಿದ ಅವರು, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳ ದೃಷ್ಟಿಯಿಂದಲೂ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಯುವ ಕಾಂಗ್ರೆಸ್ ಸದಸ್ಯರಾದ ಆದಿತ್ಯ ಗದಗಿನ ಹಾಗೂ ಆಶಿಫ್ ತಾಂಬೋಟಿ ಮಾತನಾಡಿ, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲರು ಯಾವುದೇ ಕಪ್ಪು ಚುಕ್ಕೆ ಇಲ್ಲದ ರಾಜಕೀಯ ಜೀವನ ನಡೆಸಿದ್ದಾರೆ. ಕೋವಿಡ್ ಅವಧಿಯಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಮಾನವೀಯ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಅವರ ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಯುವ ಮುಖಂಡ ಗೋಪಾಲ ಗದಗಿನ ಮಾತನಾಡಿ, 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ಜಿ.ಎಸ್. ಪಾಟೀಲರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಈ ಹಿಂದೆ ನೀಡಿದ್ದ ಭರವಸೆಯಂತೆ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಯುವ ಮುಖಂಡರಾದ ಭರಮಪ್ಪ ಮಂಗೋಜಿ, ಬುಡ್ನೇಸಾಬ ಜಲಾಲನವರ, ಮಂಜುನಾಥ ನರಗುಂದ, ಯಾಸೀನ್ ತಾಂಬೋಟಿ, ಶ್ರೀಕಾಂತ ಸಿರಿಗೇರಿ, ಮನ್ಸೂರಅಲಿ ಸುಂಕದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ರೈತರು, ಬಡವರು ಮತ್ತು ಸಾಮಾನ್ಯ ಜನರ ಪರವಾಗಿ ನಿರಂತರವಾಗಿ ಹೋರಾಟ ನಡೆಸಿರುವ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವುದು ಕಾಂಗ್ರೆಸ್ ಹೈಕಮಾಂಡ್‌ನ ನೈತಿಕ ಹೊಣೆಗಾರಿಕೆಯಾಗಿದೆ. ಸಚಿವ ಸ್ಥಾನ ನೀಡದಿದ್ದರೆ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು.”

ವೆಂಕಟೇಶ ಗದಗಿನ
ಯುವ ಕಾಂಗ್ರೆಸ್ ಮುಖಂಡರು


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!