ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರೋಣ ಕ್ಷೇತ್ರದ ಹಿರಿಯ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡ ಜಿ.ಎಸ್. ಪಾಟೀಲ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಸಿದ್ಧನಕೊಳ್ಳ ಮಠದ ಡಾ. ಶಿವಕುಮಾರ ಸ್ವಾಮೀಜಿ ಆಗ್ರಹಿಸಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಉತ್ತರ ಕರ್ನಾಟಕ ಭಾಗಕ್ಕೆ ಸಚಿವ ಸಂಪುಟದಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ಈ ಬಾರಿ ಆ ಭಾಗದ ಸಮರ್ಥ ನಾಯಕರಿಗೆ ನ್ಯಾಯ ದೊರೆಯಬೇಕು ಎಂದು ಒತ್ತಾಯಿಸಿದರು.
ಜನಪರ ಹೋರಾಟಗಳು, ಸಂಘಟನಾ ಸಾಮರ್ಥ್ಯ ಹಾಗೂ ಆಡಳಿತಾತ್ಮಕ ಅನುಭವ ಹೊಂದಿರುವ ಜಿ.ಎಸ್. ಪಾಟೀಲ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ಧಿ ಹಾಗೂ ಜನಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಅವರಂತಹ ಅನುಭವಿ ನಾಯಕನನ್ನು ಸಚಿವ ಸಂಪುಟದಿಂದ ದೂರವಿಡುವುದು ಸಮಂಜಸವಲ್ಲ. ಕಾಂಗ್ರೆಸ್ ಪಕ್ಷವನ್ನು ಗದಗ ಜಿಲ್ಲೆಯಲ್ಲಿ ಬಲಿಷ್ಠವಾಗಿ ಸಂಘಟಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದು, ಹಿಂದುಳಿದ ವರ್ಗಗಳು, ಬಡವರು ಹಾಗೂ ದಲಿತರ ಪರ ಸದಾ ಧ್ವನಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮತೋಲನಕ್ಕೆ ಬದ್ಧವಾಗಿದ್ದರೆ, ಉತ್ತರ ಕರ್ನಾಟಕದ ಪ್ರಬಲ ಪ್ರತಿನಿಧಿಯಾಗಿ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ತನ್ನ ಬದ್ಧತೆಯನ್ನು ಸಾಬೀತುಪಡಿಸಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.
ಅಲ್ಲದೆ, ಜಿ.ಎಸ್. ಪಾಟೀಲ ಅವರನ್ನು ಸಚಿವ ಸಂಪುಟಕ್ಕೆ ಸೇರಿಸದಿದ್ದರೆ ಉತ್ತರ ಕರ್ನಾಟಕದ ಜನರ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
“ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವುದು ಕೇವಲ ಒಬ್ಬ ವ್ಯಕ್ತಿಗೆ ಸಿಗುವ ಗೌರವವಲ್ಲ, ಅದು ಉತ್ತರ ಕರ್ನಾಟಕದ ಜನರಿಗೆ ದೊರೆಯುವ ನ್ಯಾಯವಾಗಿದೆ.”
ಡಾ. ಶಿವಕುಮಾರ ಸ್ವಾಮೀಜಿ



