ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಯಲ್ಲಿ ತೊಡಗಿದ್ದ ಎಸ್ಐಟಿ ಅಧಿಕಾರಿಗಳ ತಂಡ ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿ ಘಾಟ್ ಬಳಿ ಪಲ್ಟಿಯಾದ ಘಟನೆ ನಡೆದಿದೆ.
ಎಸ್ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಮತ್ತೋರ್ವ ಸಿಬ್ಬಂದಿ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ಚರ್ಚೆಗಾಗಿ ಅಧಿಕಾರಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ವಾಹನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಇನ್ನೋವಾ ಕಾರು ರಸ್ತೆ ಬದಿಯಲ್ಲಿ ಪಲ್ಟಿಯಾಗಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಘಟನೆಯ ಬಳಿಕ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.



