ನವದೆಹಲಿ: ನೀಟ್ (UG) ಮರುಪರೀಕ್ಷೆ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ಅಪ್ಲಿಕೇಶನ್‌ಗೆ ವಿಧಿಸಲಾಗಿರುವ ತಾತ್ಕಾಲಿಕ ನಿರ್ಬಂಧವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಕೇಂದ್ರ ಸರ್ಕಾರದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಂಸ್ಥೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.
ಟೆಲಿಗ್ರಾಮ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ನೇತೃತ್ವದ ಪೀಠ ಇಂದು ಕೈಗೆತ್ತಿಕೊಳ್ಳಲಿದೆ. ಕೇಂದ್ರ ಸರ್ಕಾರದ ನಿರ್ಧಾರದ ಕಾನೂನುಬದ್ಧತೆ ಮತ್ತು ಅದರ ಪರಿಣಾಮಗಳ ಕುರಿತು ನ್ಯಾಯಾಲಯದಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವ ಉದ್ದೇಶದಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶಿಫಾರಸಿನ ಮೇರೆಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಮ್ ಸೇವೆಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಈ ಆದೇಶ ಜಾರಿಗೊಳಿಸಲಾಗಿದೆ.
ಇದರ ಜೊತೆಗೆ, ಜೂನ್ 30ರವರೆಗೆ ಟೆಲಿಗ್ರಾಮ್‌ನ ಹಳೆಯ ಸಂದೇಶಗಳನ್ನು ತಿದ್ದುಪಡಿ (Message Editing) ಮಾಡುವ ವೈಶಿಷ್ಟ್ಯವನ್ನೂ ಸ್ಥಗಿತಗೊಳಿಸಲಾಗಿದೆ. ಈಗಾಗಲೇ ಪ್ರಕಟವಾಗಿರುವ ಸಂದೇಶಗಳನ್ನು ನಂತರ ಬದಲಾಯಿಸಿ ಪ್ರಶ್ನೆಪತ್ರಿಕೆ ಸೋರಿಕೆಯ ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸುವ ಸಾಧ್ಯತೆಯನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಜೂನ್ 21ರಂದು ನಡೆಯಲಿರುವ ನೀಟ್ (UG) 2026 ಮರುಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಕ್ರಮಮುಕ್ತವಾಗಿ ನಡೆಸಲು ಎನ್‌ಟಿಎ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಕಳೆದ ಬಾರಿ ನಡೆದ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದಿಂದ 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದ್ದ ಹಿನ್ನೆಲೆಯಲ್ಲಿ ಈ ಬಾರಿ ಯಾವುದೇ ಲೋಪ ಉಂಟಾಗದಂತೆ ಸರ್ಕಾರ ಮತ್ತು ಎನ್‌ಟಿಎ ವಿಶೇಷ ಎಚ್ಚರಿಕೆ ವಹಿಸಿವೆ.
ಇದೇ ವೇಳೆ, ಪರೀಕ್ಷೆಗೆ ಸಂಬಂಧಿಸಿದ ಅನುಮಾನಾಸ್ಪದ ಚಟುವಟಿಕೆಗಳು, ನಕಲಿ ವೆಬ್‌ಸೈಟ್‌ಗಳು, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಸುಳ್ಳು ಭರವಸೆ ನೀಡುವ ವ್ಯಕ್ತಿಗಳು ಅಥವಾ ಎನ್‌ಟಿಎ ಅಧಿಕಾರಿಗಳ ಹೆಸರಿನಲ್ಲಿ ವಂಚನೆ ನಡೆಸುವವರ ಕುರಿತು ಮಾಹಿತಿ ನೀಡುವಂತೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಎನ್‌ಟಿಎ ಮನವಿ ಮಾಡಿದೆ. ಇದಕ್ಕಾಗಿ ವಿಶೇಷ ದೂರು ಪೋರ್ಟಲ್‌ನ್ನೂ ಆರಂಭಿಸಲಾಗಿದೆ.



