ಲಕ್ನೋ: ಜೂನ್ 21ರಂದು ನಡೆಯಲಿರುವ NEET-UG ಮರುಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉತ್ತರ ಪ್ರದೇಶ ಸರ್ಕಾರ ಮಹತ್ವದ ಸೌಲಭ್ಯ ಘೋಷಿಸಿದ್ದು, ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ದರ ರಿಯಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಸಿದ್ಧತೆಗಳ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಯೋಗ ದಿನಾಚರಣೆ ಕುರಿತು ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ಎಲ್ಲಾ 57 ಸಾವಿರ ಗ್ರಾಮ ಪಂಚಾಯಿತಿಗಳು ಹಾಗೂ 762 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿಶೇಷ ಯೋಗ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ಈ ವರ್ಷದ ಯೋಗ ದಿನವನ್ನು ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎಂಬ ಧ್ಯೇಯವಾಕ್ಯದಡಿ ಆಚರಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯದ ಅಮೃತ ಸರೋವರಗಳು, ಐತಿಹಾಸಿಕ ತಾಣಗಳು ಹಾಗೂ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಜೂನ್ 26ರಂದು ಆಚರಿಸಲಿರುವ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಕೆಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಮೊಹರಂ ಅನ್ನು ಶಿಸ್ತಿನಿಂದ ಹಾಗೂ ಗಾಂಭೀರ್ಯದಿಂದ ಆಚರಿಸಬೇಕು. ಇದು ಶೋಕಾಚರಣೆಯ ಸಂದರ್ಭವಾಗಿದ್ದು, ಶಕ್ತಿ ಪ್ರದರ್ಶನದ ವೇದಿಕೆಯಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದರು.



