ಕಲಬುರಗಿ: ಪೊಲೀಸ್ ಇಲಾಖೆಯ ಪಿಎಸ್‌ಐಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಗಂಗಾನಗರ ಪ್ರದೇಶದಲ್ಲಿ ನಡೆದಿದೆ. ಬಸವರಾಜ ಹೆರೂರ್ (2014ರ ಬ್ಯಾಚ್ ಪಿಎಸ್‌ಐ) ಮೃತ ಅಧಿಕಾರಿ ಎಂದು ಗುರುತಿಸಲಾಗಿದೆ.
ಬಸವರಾಜ ಹೆರೂರ್ ಕಳೆದ ಎರಡು ವರ್ಷಗಳಿಂದ ಕಲಬುರಗಿ ಡಿಸಿಆರ್‌ಬಿ (DCRB) ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಸಾವಿನ ಸುದ್ದಿ ಪೊಲೀಸ್ ಇಲಾಖೆಯಲ್ಲಿ ಆಘಾತ ಮೂಡಿಸಿದೆ.
ಮಂಗಳವಾರ ತಡರಾತ್ರಿ ಬಸವರಾಜ ಹೆರೂರ್ ತಮ್ಮ ಕೆಲ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಕುರಿತು ಸುಳಿವು ನೀಡಿದ್ದರು ಎನ್ನಲಾಗಿದೆ. ವಿಷಯ ತಿಳಿದ ಸ್ನೇಹಿತರು ತಕ್ಷಣವೇ ಅವರ ತಂದೆಗೆ ಮಾಹಿತಿ ನೀಡಿದ್ದಾರೆ.
ಬಳಿಕ ಅವರ ತಂದೆ ಮನೆಗೆ ಧಾವಿಸಿ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ಯಾವುದೇ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ಬಸವರಾಜ ಹೆರೂರ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.
ಈ ಸಂಬಂಧ ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಆತ್ಮಹತ್ಯೆಯ ಹಿಂದಿನ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.



