ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಮಸ್ರುಂದ್–ಹಮಲ್ ರಸ್ತೆಯಲ್ಲಿ ಬೊಲೆರೊ ವಾಹನ ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ದುರ್ಘಟನೆ ಬುಧವಾರ ಮಧ್ಯರಾತ್ರಿ ಸಂಭವಿಸಿದೆ.
ಕಾಕ್ರೋಧಾ ಗ್ರಾಮದಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸಿ ಮಹಲ್ ಗ್ರಾಮಕ್ಕೆ ಮರಳುತ್ತಿದ್ದ ವೇಳೆ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದೆ. ಮೃತರೆಲ್ಲರೂ ಕುತೇಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಲ್ ಗ್ರಾಮದ ನಿವಾಸಿಗಳಾಗಿದ್ದಾರೆ.
ಅಪಘಾತದಲ್ಲಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ಪೊಲೀಸರು, ಜಿಲ್ಲಾಡಳಿತ ಅಧಿಕಾರಿಗಳು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಆದರೆ ಕತ್ತಲೆ ಮತ್ತು ದುರ್ಗಮ ಪ್ರದೇಶದ ಕಾರಣ ಮೃತದೇಹಗಳನ್ನು ಹೊರತೆಗೆಯಲು ಸಾಕಷ್ಟು ತೊಂದರೆ ಎದುರಾಯಿತು.
ಈ ರಸ್ತೆಯಲ್ಲಿ ಸುರಕ್ಷತಾ ತಡೆಗೋಡೆಗಳ ಕೊರತೆಯೇ ಅಪಘಾತದ ತೀವ್ರತೆಗೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.



