ಮಾಸ್ಕೋ: ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಉಕ್ರೇನ್ ಮತ್ತೊಮ್ಮೆ ಮಾಸ್ಕೋ ಮೇಲೆ ಡ್ರೋನ್ ದಾಳಿ ನಡೆಸಿದೆ.
ಈ ವಾರದಲ್ಲೇ ಎರಡನೇ ಬಾರಿಗೆ ಉಕ್ರೇನಿಯನ್ ಡ್ರೋನ್‌ಗಳು ಮಾಸ್ಕೋದ ತೈಲ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಇದೇ ವೇಳೆ ರಷ್ಯಾ ಉಕ್ರೇನ್ ರಾಜಧಾನಿ ಕೀವ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಯುದ್ಧ ಅಂತ್ಯಗೊಳಿಸುವ ಉದ್ದೇಶದಿಂದ ಅಮೆರಿಕ ಮತ್ತು ಯುರೋಪಿನ ರಾಷ್ಟ್ರಗಳ ಬೆಂಬಲ ಕೋರುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.
ರಷ್ಯಾದ ರಕ್ಷಣಾ ಸಚಿವಾಲಯದ ಪ್ರಕಾರ, ಕಳೆದ ರಾತ್ರಿ ವಿವಿಧ ಪ್ರದೇಶಗಳಲ್ಲಿ ಉಡಾಯಿಸಲಾದ 555 ಉಕ್ರೇನಿಯನ್ ಡ್ರೋನ್‌ಗಳನ್ನು ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ. ಮಾಸ್ಕೋ ನಗರವನ್ನು ಗುರಿಯಾಗಿಸಿಕೊಂಡು ಬಂದ ಸುಮಾರು 200 ಡ್ರೋನ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಮಾಸ್ಕೋ ಮೇಯರ್ ಸೆರ್ಗೆಯ್ ಸೊಬ್ಯಾನಿನ್ ಅವರು, ಹಲವು ಡ್ರೋನ್‌ಗಳು ನಗರದ ತೈಲ ಸಂಸ್ಕರಣಾಗಾರಕ್ಕೆ ಅಪ್ಪಳಿಸಿದ್ದು, ಘಟನೆಯ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಯುದ್ಧ ಅಂತ್ಯಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ನಡುವೆಯೇ ಉಭಯ ರಾಷ್ಟ್ರಗಳು ಪರಸ್ಪರ ದಾಳಿ ಮುಂದುವರಿಸಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ.



