ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಬಳಿ ಭಾರೀ ಅವಘಡವೊಂದು ಸಂಭವಿಸಿದೆ.
ಬೃಹತ್ ಅರಳಿ ಮರದ ಕೊಂಬೆಯೊಂದು ಬಸ್ ತಂಗುದಾಣದ ಮೇಲೆ ಬಿದ್ದ ಪರಿಣಾಮ ಬಸ್ ಶೆಲ್ಟರ್ ಸಂಪೂರ್ಣ ಜಖಂಗೊಂಡಿದ್ದು, ಸಮೀಪದಲ್ಲಿದ್ದ ಬೈಕ್ಗೂ ಹಾನಿಯಾಗಿದೆ. ಅದೃಷ್ಟವಶಾತ್ ಘಟನೆ ವೇಳೆ ಬಸ್ ನಿಲ್ದಾಣದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದ ಭಕ್ತರು ಹಾಗೂ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ದೇವಾಲಯದ ಸಮೀಪವಿರುವ ಬಸ್ ತಂಗುದಾಣದ ಮೇಲೆ ಸುಮಾರು 100 ವರ್ಷಗಳಷ್ಟು ಹಳೆಯದಾದ ಬೃಹತ್ ಅರಳಿ ಮರದ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದಿದೆ.
ಕೊಂಬೆ ಬಿದ್ದ ರಭಸಕ್ಕೆ ಬಸ್ ಶೆಲ್ಟರ್ ಸಂಪೂರ್ಣ ಧ್ವಂಸಗೊಂಡಿದ್ದು, ಅಲ್ಲೇ ನಿಲ್ಲಿಸಲಾಗಿದ್ದ ಬೈಕ್ ಕೂಡ ಹಾನಿಗೊಳಗಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಅಥವಾ ಭಕ್ತರು ಇಲ್ಲದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಸ್ಥಳೀಯರ ಪ್ರಕಾರ, ಕಳೆದ ಮಂಗಳವಾರವೂ ಇದೇ ಮರದ ಮತ್ತೊಂದು ಕೊಂಬೆ ಮುರಿದು ಬಿದ್ದಿತ್ತು. ಆದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಮರದ ಕೊಂಬೆಗಳು ದುರ್ಬಲಗೊಂಡು ಮುರಿದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಕ್ಷೇತ್ರಕ್ಕೆ ಆಗಮಿಸುವ ಭಕ್ತರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅಪಾಯಕಾರಿ ಸ್ಥಿತಿಯಲ್ಲಿರುವ ಹಳೆಯ ಮರಗಳ ಕೊಂಬೆಗಳನ್ನು ತಕ್ಷಣ ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿರುವ ಸ್ಥಳೀಯರು, ಮತ್ತೊಂದು ಅವಘಡ ಸಂಭವಿಸುವ ಮುನ್ನ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.



