ಮುಂಬೈ: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ 18 ವರ್ಷದ ಯುವಕನಿಗೆ ಜೂನ್ 21ರಂದು ನಡೆಯಲಿರುವ ನೀಟ್ (NEET) ಮರುಪರೀಕ್ಷೆಗೆ ಹಾಜರಾಗಲು ಮುಂಬೈನ ವಿಶೇಷ ಪೋಕ್ಸೋ ನ್ಯಾಯಾಲಯ ನಾಲ್ಕು ದಿನಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ.
ಆರೋಪಿಯ ಜಾಮೀನು ಅರ್ಜಿಗೆ ಸಂತ್ರಸ್ತೆ ಯಾವುದೇ ಆಕ್ಷೇಪಣೆ ಸಲ್ಲಿಸದ ಹಿನ್ನೆಲೆಯಲ್ಲಿ, ಜಾಮೀನಿನ ಅವಧಿಯಲ್ಲಿ ಸಂತ್ರಸ್ತೆ ಅಥವಾ ಆಕೆಯ ಕುಟುಂಬಕ್ಕೆ ಯಾವುದೇ ರೀತಿಯ ಬೆದರಿಕೆ ಅಥವಾ ಕಿರುಕುಳ ನೀಡುವುದಿಲ್ಲ ಎಂಬ ಷರತ್ತಿನ ಮೇಲೆ ವಿಶೇಷ ನ್ಯಾಯಾಧೀಶ ಎಸ್.ಆರ್. ಶರ್ಮಾ ಅವರು ಜಾಮೀನು ನೀಡಿದರು. ನ್ಯಾಯಾಲಯವು 50 ಸಾವಿರ ರೂ.ಗಳ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಶೂರಿಟಿ ಸಲ್ಲಿಸುವಂತೆ ಆದೇಶಿಸಿದೆ.
ನೀಟ್ ಮರುಪರೀಕ್ಷೆ ಮುಗಿದ ಬಳಿಕ ಜೂನ್ 22ರಂದು ಮಧ್ಯಾಹ್ನ 2 ಗಂಟೆಯೊಳಗೆ ಸಂಬಂಧಿತ ಅಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಸೂಚಿಸಿದೆ.
ಆರೋಪಿ ಪರ ವಕೀಲ ಕಪಿಲ್ ವಿಶ್ವಾಸ್ ಜೋಡ್ಜ್ ವಾದ ಮಂಡಿಸಿ, ಅಪರಾಧ ನ್ಯಾಯ ವ್ಯವಸ್ಥೆಯ ಉದ್ದೇಶ ಶಿಕ್ಷೆಯ ಜೊತೆಗೆ ಪುನರ್ವಸತಿಗೂ ಅವಕಾಶ ಕಲ್ಪಿಸುವುದಾಗಿದೆ ಎಂದು ತಿಳಿಸಿದರು. ವೈದ್ಯಕೀಯ ಪ್ರವೇಶ ಪರೀಕ್ಷೆ ವಿದ್ಯಾರ್ಥಿಯ ಭವಿಷ್ಯಕ್ಕೆ ಮಹತ್ವದ್ದಾಗಿದ್ದು, ಪೊಲೀಸ್ ಬೆಂಗಾವಲಿನಲ್ಲಿ ಪರೀಕ್ಷೆ ಬರೆಯುವುದರಿಂದ ಆತನ ಮಾನಸಿಕ ಸ್ಥಿತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಆದ್ದರಿಂದ ಪರೀಕ್ಷೆಗೆ ಸಿದ್ಧತೆ ನಡೆಸಲು ಅಗತ್ಯ ಸಮಯ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು.
ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸರ್ಕಾರಿ ಅಭಿಯೋಜಕಿ ಚೈತ್ರಾಲಿ ಪನ್ಶಿಕರ್, ಆರೋಪ ಗಂಭೀರ ಸ್ವರೂಪದ್ದಾಗಿದ್ದು ಜಾಮೀನು ನೀಡಬಾರದು ಎಂದು ವಾದಿಸಿದರು. ಅಗತ್ಯವಿದ್ದರೆ ಕೇವಲ ಒಂದು ದಿನ ಪೊಲೀಸ್ ಬೆಂಗಾವಲಿನಲ್ಲಿ ಪರೀಕ್ಷೆಗೆ ಹಾಜರಾಗಲು ಮಾತ್ರ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯ, ಆರೋಪಿ ಜಾಮೀನಿನ ಅವಧಿಯಲ್ಲಿ ಸಂತ್ರಸ್ತೆಯನ್ನು ಯಾವುದೇ ರೀತಿಯಲ್ಲಿ ಸಂಪರ್ಕಿಸಬಾರದು, ಸಾಕ್ಷ್ಯ ನಾಶಪಡಿಸಬಾರದು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ವ್ಯಕ್ತಿಗೆ ಬೆದರಿಕೆ ಅಥವಾ ಪ್ರಚೋದನೆ ನೀಡಬಾರದು ಎಂದು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ. ಜೊತೆಗೆ, ನೀಟ್ ಮರುಪರೀಕ್ಷೆಗೆ ಹಾಜರಾದ ಬಗ್ಗೆ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿ, ನಾಲ್ಕು ದಿನಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ.



