ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಪುರಸಭೆ ಕಾಲೇಜು ಆವರಣದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆ.ಯು.ಡಬ್ಲ್ಯೂ.ಎಸ್.) ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಜಲಾಗಾರ ಕಾಮಗಾರಿ ಸ್ಥಳಾಂತರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆದಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ಪ್ರತಿಭಟನೆಯಿಂದ ಸ್ಥಗಿತಗೊಂಡಿದ್ದ ಕಾಮಗಾರಿ ಸ್ಥಳದಲ್ಲಿ ಅಧಿಕಾರಿಗಳು, ಇಂಜಿನಿಯರ್ಗಳು ಹಾಗೂ ಗುತ್ತಿಗೆದಾರರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಕಾಮಗಾರಿ ಸಂಬಂಧ ಸಮಗ್ರ ಮಾಹಿತಿ ಸಂಗ್ರಹಿಸಿದರು.
ಈ ವೇಳೆ ಪ್ರತಿಭಟನಾಕಾರರು, ಕುಡಿಯುವ ನೀರಿನ ಯೋಜನೆಗೆ ತಮ್ಮ ವಿರೋಧವಿಲ್ಲ. ಆದರೆ ಭವಿಷ್ಯದಲ್ಲಿ ಕಾಲೇಜು ಸರ್ಕಾರಕ್ಕೆ ಹಸ್ತಾಂತರವಾಗಲಿದ್ದು, ಕಟ್ಟಡ ವಿಸ್ತರಣೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕಾಮಗಾರಿಯನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಜಲಾಗಾರ ನಿರ್ಮಾಣದಿಂದ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಇದು ಪುರಸಭೆಯ ಆಸ್ತಿಯಾಗಿದ್ದು, ಕುಡಿಯುವ ನೀರು ಜನರ ಮೂಲಭೂತ ಅಗತ್ಯವಾಗಿದೆ. ಜನರ ಅನುಕೂಲಕ್ಕಾಗಿ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ಯೋಜನೆಗೆ ಅನಗತ್ಯ ಅಡ್ಡಿಪಡಿಸುವುದು ಸರಿಯಲ್ಲ ಎಂದು ಹೇಳಿದರು.
ಕಾಮಗಾರಿಗೆ ವಿರೋಧ ವ್ಯಕ್ತಪಡಿಸಲು ಸೂಕ್ತ ದಾಖಲೆಗಳು ಅಥವಾ ಕಾನೂನು ಆಧಾರಗಳಿದ್ದರೆ ಸಲ್ಲಿಸಿ, ಅವುಗಳನ್ನು ಪರಿಶೀಲಿಸಲಾಗುವುದು. ಆದರೆ ಯಾವುದೇ ಕಾರಣಕ್ಕೂ ಯೋಜನೆ ವಿಳಂಬವಾಗಬಾರದು ಎಂದು ಸ್ಪಷ್ಟಪಡಿಸಿದರು.
ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪೈಪ್ಲೈನ್ ಅಳವಡಿಕೆ, ಪಂಪ್ಸೆಟ್ ಅಳವಡಿಕೆ ಸೇರಿದಂತೆ ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳನ್ನು ಶೀಘ್ರ ಮುಗಿಸಬೇಕು. ನಿರ್ಮಾಣ ಸಾಮಗ್ರಿಗಳನ್ನು ಕಾಲೇಜು ಆವರಣದ ಹೊರಭಾಗದಲ್ಲಿ ಸಂಗ್ರಹಿಸಬೇಕು ಎಂದು ನಿರ್ದೇಶನ ನೀಡಿದರು.
ಪಟ್ಟಣದ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಕಾಮಗಾರಿ ವಿಳಂಬಕ್ಕೆ ಅವಕಾಶ ನೀಡಬಾರದು. ಕೆ.ಯು.ಡಬ್ಲ್ಯೂ.ಎಸ್. ಹಾಗೂ ಪುರಸಭೆ ಅಧಿಕಾರಿಗಳು ನಿರಂತರ ನಿಗಾವಹಿಸಬೇಕು. ತಾವೂ ಸಹ ಕಾಲಕಾಲಕ್ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.
ಇದೇ ವೇಳೆ ಒಳಚರಂಡಿ ಕಾಮಗಾರಿಯಿಂದ ಹದಗೆಟ್ಟಿರುವ ರಸ್ತೆಗಳ ದುರಸ್ತಿ ಹಾಗೂ ಕಾಲೇಜು ಕಟ್ಟಡದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶೀಲನೆ ವೇಳೆ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಗ್ರೇಡ್-2 ತಹಸೀಲ್ದಾರ್ ಮಂಜುನಾಥ ಅಮಾಸಿ, ಕೆ.ಯು.ಡಬ್ಲ್ಯೂ.ಎಸ್. ಇಂಜಿನಿಯರ್ ಜೆ.ಬಿ. ಹೊಸಮನಿ, ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್, ಇಂಜಿನಿಯರ್ ಈರಣ್ಣ ದುರಗಣ್ಣವರ, ಪ್ರಭಾರಿ ಪ್ರಾಚಾರ್ಯ ವಾಗೀಶ ನಾಗಶೆಟ್ಟಿ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
“ಕುಡಿಯುವ ನೀರು ಜನರ ಮೂಲಭೂತ ಹಕ್ಕು. ಸರ್ಕಾರ ಜನರ ಅನುಕೂಲಕ್ಕಾಗಿ ಕೈಗೊಂಡಿರುವ ಯೋಜನೆಗಳು ಯಾವುದೇ ಕಾರಣಕ್ಕೂ ವಿಳಂಬವಾಗಬಾರದು. ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳ್ಳಬೇಕು.”
– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ



